ಬೆಂಗಳೂರು- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ ಬಾಹ್ಯಮೂಲ, ಹೊರಗುತ್ತಿಗೆ ಹಾಗೂ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳುವ ಮುನ್ನ ಪೊಲೀಸ್ ಪರಿಶೀಲನಾ ಪ್ರಮಾಣ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರ ಕಚೇರಿ ಸುತ್ತೋಲೆ ಹೊರಡಿಸಿದ್ದು, ಇಲಾಖೆಯ ಅಧೀನ ಕಚೇರಿಗಳಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ತಾತ್ಕಾಲಿಕ ಸಿಬ್ಬಂದಿಗೂ ಪೊಲೀಸ್ ಪರಿಶೀಲನಾ ಪ್ರಮಾಣ ಪತ್ರ ಪಡೆಯುವಂತೆ ಸೂಚಿಸಲಾಗಿದೆ.
ಪೊಲೀಸ್ ಇಲಾಖೆಯ ಸೆಪ್ಟೆಂಬರ್ 8, 2026ರ ಸಭಾ ನಡವಳಿಯನ್ನು ಉಲ್ಲೇಖಿಸಿರುವ ಇಲಾಖೆ, ಸೆಪ್ಟೆಂಬರ್ 3ರಂದು ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಈ ಕ್ರಮ ಜಾರಿಗೊಳಿಸಲಾಗಿದೆ ಎಂದು ತಿಳಿಸಿದೆ. ಕರ್ನಾಟಕ ಹೈಕೋರ್ಟ್‌ನ ಕ್ರಿಮಿನಲ್ ಅಪೀಲ್ ನಂ. 1225/2016ರ ನಿರ್ದೇಶನಗಳ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ಹಿನ್ನೆಲೆ ಪರಿಶೀಲನೆ, ಗುರುತು ಮತ್ತು ದೃಢೀಕರಣ, ನೋಂದಣಿ ವ್ಯವಸ್ಥೆ ಹಾಗೂ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ರೂಪಿಸುವ ಕುರಿತು ಸಭೆ ನಡೆದಿತ್ತು.
ಸಭೆಯ ಕ್ರಮ ಸಂಖ್ಯೆ 7ರಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳು ತಾತ್ಕಾಲಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಪೊಲೀಸ್ ಪರಿಶೀಲನಾ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಸೂಚಿಸಲಾಗಿತ್ತು.
ಅದರಂತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ ಯಾವುದೇ ಬಾಹ್ಯಮೂಲ, ಹೊರಗುತ್ತಿಗೆ ಅಥವಾ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಯನ್ನು ನೇಮಿಸಿಕೊಳ್ಳುವ ಮೊದಲು ಅವರ ಹಿನ್ನೆಲೆ ಹಾಗೂ ಕ್ರಿಮಿನಲ್ ಪ್ರಕರಣಗಳ ಕುರಿತು ಪೊಲೀಸ್ ಇಲಾಖೆಯಿಂದ ಪರಿಶೀಲನೆ ನಡೆಸಿ, ಪ್ರಮಾಣ ಪತ್ರ ಪಡೆಯಬೇಕು ಎಂದು ಸೂಚಿಸಲಾಗಿದೆ.
ಇದರ ಜತೆಗೆ, ತಾತ್ಕಾಲಿಕ ಸಿಬ್ಬಂದಿಯ ಗುರುತಿನ ಪುರಾವೆಗಳು, ಅಗತ್ಯ ದಾಖಲೆಗಳು ಹಾಗೂ ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ದೂರವಾಣಿ ಸಂಖ್ಯೆಗಳನ್ನೂ ಸಂಗ್ರಹಿಸಬೇಕು ಎಂದು ಇಲಾಖೆ ನಿರ್ದೇಶನ ನೀಡಿದೆ.
ಈ ನಿಯಮವು ಹೊಸದಾಗಿ ನೇಮಕಗೊಳ್ಳುವ ಸಿಬ್ಬಂದಿಗೆ ಮಾತ್ರವಲ್ಲದೆ, ಈಗಾಗಲೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ತಾತ್ಕಾಲಿಕ ಸಿಬ್ಬಂದಿಗೂ ಅನ್ವಯವಾಗಲಿದೆ. ಹೀಗಾಗಿ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಪೊಲೀಸ್ ಪರಿಶೀಲನಾ ಪ್ರಮಾಣ ಪತ್ರವನ್ನೂ ಕಡ್ಡಾಯವಾಗಿ ಪಡೆಯಬೇಕಾಗಿದೆ.
ಈ ಕ್ರಮದ ಮೂಲಕ ಸರ್ಕಾರಿ ಇಲಾಖೆಗಳ ತಾತ್ಕಾಲಿಕ ಸಿಬ್ಬಂದಿಯ ಹಿನ್ನೆಲೆ ಪರಿಶೀಲನೆ, ಗುರುತು ದೃಢೀಕರಣ ಮತ್ತು ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ.
📄 Official Documents / Supporting Documents

