ಮಂಡ್ಯ: ಮನೆಯಲ್ಲಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ.
ಸಂಜೀವ್ (5) ಮೃತಬಾಲಕ. ಮನೆಯಲ್ಲಿ ಕಣ್ಣಾಮುಚ್ಚಾಲೆ ಆಟ ಆಡುವಾಗ ಅವಿತುಕೊಳ್ಳಲೆಂದು ಮನೆ ಬಾಗಿಲು ತೆಗೆಯುತ್ತಿದ್ದಂತೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು ಬಾಲಕ ಕುಸಿದು ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಯತ್ನಿಸಿದ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಬಾಲಕನ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.