ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರು ನಡುರಸ್ತೆಯಲ್ಲಿಯೇ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ.
ಮಂಗಳೂರಿನ ಕುಲಶೇಖರ ಕಲ್ಪನೆ ಬಳಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಚಾಲಕ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಕ್ಷಣದಲ್ಲೇ ಸ್ವಿಫ್ಟ್ ಕಾರು ಧಗಧಗನೆ ಹೊತ್ತಿ ಉರಿದಿದೆ.
ಒಂದೆಡೆ ಮಳೆ ಸುರಿಯುತ್ತಿದ್ದರೂ ನಡುರಸ್ತೆಯಲ್ಲಿ ಕಾರು ಬೆಂಕಿಯಲ್ಲಿ ಹೊತ್ತಿ ಉರಿದಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕರು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.