ಬೆಳಗಾವಿಯಲ್ಲಿ ಭಾರಿ ಹೂಡಿಕೆ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಸಾವಿರಾರು ಜನರಿಂದ ₹160 ಕೋಟಿಗೂ ಅಧಿಕ ಹಣ ಸಂಗ್ರಹಿಸಿದ ಆರೋಪದ ಮೇಲೆ ‘ಅಪೇಕ್ಷಾ ಬೀಜ್ ಕಾರ್ಪ್ ಎಲ್ಎಲ್ಪಿ’ (Apeksha Beej Corp LLP) ಕಂಪನಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕಂಪನಿಯ ಪ್ರಮುಖರು ಪರಾರಿಯಾಗಿದ್ದು, ಹೂಡಿಕೆದಾರರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಅಪೇಕ್ಷಾ ಬೀಜ್ ಕಾರ್ಪ್ ಎಲ್ಎಲ್ಪಿ’ ಎಂಬ ಕಂಪನಿಯು ಹೂಡಿಕೆದಾರರಿಗೆ ಪ್ರತಿ ತಿಂಗಳು ಶೇ. 3ರಿಂದ 4ರಷ್ಟು ಬಡ್ಡಿ ನೀಡುವುದಾಗಿ ಭರವಸೆ ನೀಡಿ ಸಾರ್ವಜನಿಕರಿಂದ ಲಕ್ಷಾಂತರ ಹಣ ಸಂಗ್ರಹಿಸಿರುವ ಆರೋಪ ಕೇಳಿಬಂದಿದೆ.
ಈ ಆಮಿಷಕ್ಕೆ ಒಳಗಾಗಿ ಸುಮಾರು 3,500ಕ್ಕೂ ಹೆಚ್ಚು ಜನರು ತಮ್ಮ ಜೀವನಪೂರ್ತಿ ಸಂಗ್ರಹಿಸಿದ್ದ ಹಣವನ್ನು ಕಂಪನಿಯಲ್ಲಿ ಹೂಡಿಕೆ ಮಾಡಿದ್ದರು. ಆದರೆ, ಬಳಿಕ ಕಂಪನಿಯು ತನ್ನ ಕಚೇರಿಯನ್ನು ಮುಚ್ಚಿ ಯಾವುದೇ ಮಾಹಿತಿ ನೀಡದೆ ಕಾರ್ಯಾಚರಣೆ ಸ್ಥಗಿತಗೊಳಿಸಿರುವುದರಿಂದ ಹೂಡಿಕೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ₹160 ಕೋಟಿಗೂ ಅಧಿಕ ಮೊತ್ತದ ವಂಚನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣದಲ್ಲಿ ಕಂಪನಿಯ ಸಿಎಂಡಿ ಕಾಶಿನಾಥ್ ವಾಗ್ಮೋನಿ ದುಬೈಗೆ ಪರಾರಿಯಾಗಿದ್ದು, ಎಂಡಿ ಗಣೇಶ್ ಭಂಡಾರಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಇವರಿಬ್ಬರನ್ನು ಸೇರಿ ಒಟ್ಟು ಎಂಟು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕಂಪನಿ ಹಣ ಮರಳಿಸದೆ ಕಚೇರಿ ಮುಚ್ಚಿದ ಬಳಿಕ ಆಕ್ರೋಶಗೊಂಡ ಹೂಡಿಕೆದಾರರು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹೆಚ್ಚಿನ ಲಾಭದ ಭರವಸೆ ನೀಡುವ ಹೂಡಿಕೆ ಯೋಜನೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಿ ಹೂಡಿಕೆದಾರರ ಹಣವನ್ನು ಮರಳಿ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

