ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ತಿಂಗಳಾಂತ್ಯಕ್ಕೆ ಮೆಟ್ರೋ ನಿಲ್ದಾಣಗಳಲ್ಲಿ ಕೆಎಂಎಫ್ ನ ನಂದಿನಿ ಉತ್ಪನ್ನಗಳು ಸಿಗಲಿವೆ.
ಜುಲೈ ಅಂತ್ಯಕ್ಕೆ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಕೆಎಂಎಫ್ ನ ನಂದಿನಿ ಮಳಿಗೆ ಓಪನ್ ಮಾಡಲು ಬಿಎಂಆರ್ ಸಿಎಲ್ ಸಿದ್ಧತೆ ನಡೆಸಿದೆ.
ನಮ್ಮ ಮೆಟ್ರೋದ ಹತ್ತು ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಇದೀಗ ಆರಂಭಿಕ ಹಂತವಾಗಿ ಮೂರು ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಸಿದ್ಧತೆ ನಡೆದಿದೆ.
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜು ಮೆಟ್ರೋ ನಿಲ್ದಾಣ ಹಾಗೂ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭವಾಗಲಿದೆ. ಈ ತಿಂಗಳಾಂತ್ಯ ಅಥವಾ ಆಗಸ್ಟ್ ಮೊದಲ ವಾರದಿಂದ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನ ಸಾರ್ವಜನಿಕರಿಗೆ ಲಭ್ಯವಿರಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್ ಎಂಡಿ ಶಿವಸ್ವಾಮಿ ಈಗಾಗಲೇ ಮೂರು ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಸೇವೆ ಆರಂಭಕ್ಕೆ ತಯಾರಿ ನಡೆಸಲಾಗುತ್ತಿದೆ. ಮುಂದಿನ ವಾರ ಉದ್ಘಾಟನೆಗೆ ಪ್ಲಾನ್ ಮಾಡಲಾಗಿದೆ ಎಂದಿದ್ದಾರೆ.