ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-ಜಾತಿಗಾಣತಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸುಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 18ರವರೆಗೆ ದಸರಾ ರಜೆ ವಿಸ್ತರಣೆ ಮಾಡಲಾಗಿದ್ದು, ಎಲ್ಲಾ ಸರ್ಕಾರಿ ಶಾಲೆಯ ಶಿಕ್ಷಕರು ಹಾಗೂ ಪಿಯು ಕಾಲೇಜಿನ ಉಪನ್ಯಾಸಕರನ್ನು ಸಮೀಕ್ಷೆಗೆ ಬಳಸಿಕೊಳ್ಳಲಾಗುತ್ತಿದೆ. ನಾಳೆಯಿಂದ 12 ದಿನಗಳ ಒಳಗಾಗಿ ರಾಜ್ಯಾದ್ಯಂತ ಸಮೀಕ್ಷೆ ಮುಗಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನು ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆ ನಡೆಯುತ್ತಿರುವುದರಿಂದ ಪರೀಕ್ಷೆಯಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು, ಉಪನ್ಯಾಸಕರು ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗುವ ಅವಶ್ಯಕತೆ ಇಲ್ಲ. ಪರೀಕ್ಷೆಯಲ್ಲಿ ಭಾಗಿಯಾದವರನ್ನು ಬಿಟ್ಟು ಉಳಿದ ಶಿಕ್ಷಕರು, ಸಿಬ್ಬಂದಿಗಳು ಸಮೀಕ್ಷೆಗೆ ಹಾಜರಾಗುವಂತೆ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ದಸರಾ ರಜೆ ವಿಸ್ತರಣೆಯಾಗಿದ್ದು, ಖಾಸಗಿ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.