ಬೆಂಗಳೂರು : ನಿಗದಿಗಿಂತ ಅಧಿಕ ಪ್ರಮಾಣದಲ್ಲಿ ಜಲ್ಲಿ, ಸೈಜುಗಲ್ಲು, ಮರಳು ಮತ್ತು ಎಂ.ಸ್ಯಾಂಡ್ ಸಾಗಿಸುವ ವಾಹನಗಳ ವಿರುದ್ಧ ಕೈಗೊಂಡಿರುವ ಕ್ರಮ ಹಾಗೂ ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅವರು ನಗರದ ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಧಿಕಾರಿಗಳ ಕರ್ತವ್ಯ ಲೋಪದಿಂದಾಗಿ ಸರ್ಕಾರಕ್ಕೆ ಸಂದಾಯವಾಗಬೇಕಿದ್ದ ರಾಜಸ್ವ ಬರುತ್ತಿಲ್ಲ. ನಿಯಮ ಉಲ್ಲಂಘಿಸಿದ ಲಾರಿಗಳಿಗೆ ಜಿಲ್ಲಾಧಿಕಾರಿಗಳು ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ. ಆದರೆ, ಅಧಿಕಾರಿಗಳು ದಂಡ ವಸೂಲಿ ಮಾಡಲು ಮೀನಾಮೇಷ ಎಣಿಸುತ್ತಿದ್ದಾರೆ. ಇನ್ನೂ ಮುಂದೆ ಮಿತಿಮೀರಿ ಲೋಡ್ ಸಾಗಿಸುವ ವಾಹನಗಳಿಗೆ ಮುಲಾಜಿಲ್ಲದೆ ದಂಡ ಹಾಕಬೇಕು. ಆದಾಯ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕ್ರೀಡಾ ಇಲಾಖೆಯ ಅಧಿಕಾರಿಗಳು ‘ಖೇಲೋ ಇಂಡಿಯಾ’ಕ್ಕೆ ಹೆಚ್ಚು ಒತ್ತು ನೀಡುವ ಕೆಲಸ ಆಗಬೇಕು. ಸ್ಥಳೀಯ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು. ಅದಕ್ಕೆ ತಕ್ಕಂತೆ ಇಲಾಖೆಯ ಅಧಿಕಾರಿಗಳು ಕೆಲಸ ಮಾಡಬೇಕು.
ತನ್ಮೂಲಕ ಮುಂದಿನ ದಿನಗಳಲ್ಲಿ ‘ಖೇಲೋ ಇಂಡಿಯಾ’ ಕ್ರೀಡಾಕೂಟಕ್ಕೆ ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಕಳಪೆ ಗುಣಮಟ್ಟದ್ದಾಗಿದ್ದು, ಕೆಲವೆಡೆ ಕಾಮಗಾರಿ ನಡೆಸದೆ ಗುತ್ತಿಗೆದಾರರು ಬಿಲ್ ಪಡೆದಿರುವ ಬಗ್ಗೆ ದೂರುಗಳು ಬಂದಿವೆ. ಸಾಕಷ್ಟು ಮನೆಗಳಿಗೆ ನಲ್ಲಿ ಸಂಪರ್ಕವನ್ನೇ ಕಲ್ಪಿಸದಿರುವುದು ಕಂಡುಬಂದಿದ್ದು, ಅಂತಹ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಅವರು ತಿಳಿಸಿದರು.
ಮಹದೇವಪುರ ಕ್ಷೇತ್ರ ಹಾಗೂ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ಉದ್ಘಾಟನೆಗಳಿಗೆ ಲೋಕಸಭಾ ಸದಸ್ಯರನ್ನು ಆಹ್ವಾನ ಮಾಡುವಂತೆ ಹಾಗೂ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಹಾಯಕ ಕಾರ್ಯಪಾಲ ಇಂಜನಿಯರ್ ರವರಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವಂತಹ ಹಾಸ್ಟೆಲ್ ಗಳಲ್ಲಿ ಮಕ್ಕಳಿಗೆ ನೀಡುವ ಆಹಾರ ಪಾದರ್ಥಗಳ ಗುಣಮಟ್ಟವನ್ನು ಪರಿಶೀಲಿಸಿ ನಿಗದಿಪಡಿಸಿದ ಮೆನು ಚಾರ್ಟ್ ಪ್ರಕಾರ ಆಹಾರವನ್ನು ವಿತರಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಮಾತನಾಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 44 ಮೆಟ್ರಿಕ್ ನಂತರದ ಮತ್ತು 13 ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 7 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರ ನಿಗದಿಪಿಡಿಸಿರುವ ಮೆನು ಚಾರ್ಟ್ ಪ್ರಕಾರ ಆಹಾರವನ್ನು ನೀಡಲಾಗುತ್ತಿದೆ . ಅಲ್ಲದೇ, ವಿದ್ಯಾರ್ಥಿ ನಿಲಯಗಳಲ್ಲಿ ಟೇಸ್ಟ್ ರಿಜಿಸ್ಟರ್ ನ್ನು ನಿರ್ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ ಪಿ.ಸಿ ಮೋಹನ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ. ಜಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯತೀಶ್.ಆರ್ ಅವರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.