ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ ಆರ್ಟಿಐ ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳು ಜನಪ್ರತಿನಿಧಿಗಳನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದ್ದು, ಆರ್‌ಟಿಐ ಕಾರ್ಯಕರ್ತರಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆಯಲ್ಲಿ ಶಾಸಕರು ಒತ್ತಾಯಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಮಹಾಂತೇಶ ಕೌಜಲಗಿ ಕೇಳಿದ ಪ್ರಶ್ನೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಧ್ವನಿಗೂಡಿಸಿದ್ದಾರೆ. ಆರ್ಟಿಐ ಕಾರ್ಯಕರ್ತರು ಭವ್ಯ ಬಂಗಲೆ ಕಟ್ಟಿಸಿಕೊಂಡು ಮನೆ ಮುಂದೆ ಕಾರು ನಿಲ್ಲಿಸಿಕೊಂಡು ವೈಭವದ ಜೀವನ ನಡೆಸುತ್ತಿದ್ದಾರೆ. ಅವರಿಗೆ ಹಣ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದ್ದಾರೆ.
ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡುವುದೇ ಅವರಿಗೆ ಕಸುಬಾಗಿದೆ. ಭ್ರಷ್ಟಾಚಾರ ತಡೆಗೆ ಕಾಯ್ದೆ ರೂಪಿಸಲಾಗಿದೆ. ಅದೇ ಮಾದರಿಯಲ್ಲಿ ಆರ್‌ಟಿಐ ಕಾರ್ಯಕರ್ತರ ಭ್ರಷ್ಟಾಚಾರ ತಡೆಗೆ ಅಗತ್ಯ ಕಾನೂನು ರೂಪಿಸಬೇಕು. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಆರ್ಟಿಐ ಕಾಯ್ದೆ ದುರುಪಯೋಗವಾಗುತ್ತಿರುವುದನ್ನು ಅಲ್ಲಗಳೆಯಲಾಗದು. ಆಡಳಿತ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಕಾಯ್ದೆ ಅನುಕೂಲವಾಗಿದೆ. ದುರುಪಯೋಗ ತಡೆಯಲು ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿದ್ದು, ಸದಸ್ಯರು ನಿರ್ದಿಷ್ಟ ಪ್ರಕರಣ ಉಲ್ಲೇಖಿಸಿ ಮಾಹಿತಿ ನೀಡುವಂತೆ ಮನವಿ ಮಾಡಿದರು.