ನಿನ್ನೆ ( ಮಾರ್ಚ್ 1 ) ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ವೆಸ್ಟ್ ಇಂಡೀಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಕಂಡು ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆರಿಸಿಕೊಂಡು ವೆಸ್ಟ್ ಇಂಡೀಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ವೆಸ್ಟ್ ಇಂಡೀಸ್ ಬ್ಯಾಟಿಂಗ್ ವಿಭಾಗದ ಉತ್ತಮ ಆಟದಿಂದಾಗಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಕಲೆಹಾಕಿ ಭಾರತಕ್ಕೆ 196 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 19.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 199 ರನ್ ಕಲೆಹಾಕಿತು.
ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 97 ರನ್ ಬಾರಿಸಿ ಗೆಲುವಿನ ರೂವಾರಿಯಾಗಿ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು. ಕಷ್ಟಕರ ಗುರಿಯನ್ನು ಟಿ ಟ್ವೆಂಟಿ ಸ್ಪೆಷಲಿಸ್ಟ್ ದೇಶದ ವಿರುದ್ಧ ಗೆದ್ದ ಭಾರತ ಯಾರೂ ಊಹಿಸಿರದ ರೀತಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು.
ಹೀಗೆ ಭಾರತ ಸೆಮಿಫೈನಲ್ ಪ್ರವೇಶಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಮಿರ್ ವಿರುದ್ಧ ಟೀಕೆಗಳು ಎದ್ದಿವೆ. ಮೊಹಮ್ಮದ್ ಅಮಿರ್ ಸೂಪರ್ 8 ಸುತ್ತು ಆರಂಭವಾದಾಗಿನಿಂದ ಪಾಕಿಸ್ತಾನ ಸೆಮಿಫೈನಲ್ ತಲುಪಲಿದೆ ಆದರೆ ಭಾರತ ತಲುಪುವುದಿಲ್ಲ ಎಂದಿದ್ದರು. ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸೋಲಲಿದೆ, ದೇವರೇ ಧರೆಗಿಳಿದು ಬಂದರೂ ಅವರು ಗೆಲ್ಲುವುದಿಲ್ಲ ಎಂದು ಹೇಳಿಕೊಂಡಿದ್ದರು. ಆದರೆ ಇದೀಗ ಭಾರತ ಸೆಮಿಫೈನಲ್ ತಲುಪಿ, ಪಾಕಿಸ್ತಾನ ಸೆಮಿಫೈನಲ್ ಟಿಕೆಟ್ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದು, ಅಮೀರ್ ಊಹೆ ತಲೆ ಕೆಳಗಾಗಿದೆ. ತಲೆಕೆಟ್ಟ ಭವಿಷ್ಯ ನುಡಿದು ಇದೀಗ ಅಮಿರ್ ಜೋಕರ್ ಆಗಿದ್ದಾರೆ ಎಂದು ಭಾರೀ ಟ್ರೋಲ್‌ಗಳು ಹರಿದಾಡುತ್ತಿವೆ.

