ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ ಹೆಚ್ಚಳವಾಗಿದೆ. ಶಿವಮೊಗ್ಗ, ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೆ.ಎಫ್ ಡಿ.ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆತಂಕ ಮನೆ ಮಾಡಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ 9 ಜನರಲ್ಲಿ ಮಂಗನ ಕಾಯಿಲೆ ಅಥವಾ ಕೆ.ಎಫ್.ಡಿ.ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಕಾಡಂಚಿನ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮಲೆನಾಡಿನ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗುತ್ತಿದಂತೆಯೇ ಮಂಗನ ಕಾಯಿಲೆ ಹೆಚ್ಚುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹೆಚ್ಚು ಪತ್ತೆಯಾಗುತ್ತಿದ್ದು, ಜನರ ನಿದ್ದೆಗೆಡಿಸಿದೆ.
ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಮೊದಲ ಬಲಿಯಾಗಿದೆ. ಚಿಕ್ಕಮಗಳೂರಿನ ಎನ್.ಆರ್.ಪುರ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ತಾಲೂಕುಗಳಲ್ಲಿ ಮಂಗನಕಾಯಿಲೆ ಲಕ್ಷಣಗಳು ಕಂಡುಬರುತ್ತಿದ್ದು, ಈಗಾಗಲೇ 9 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 6 ಜನರು ಗುಣಮುಖರಾಗಿದ್ದಾರೆ. ಉಳಿದ ಮೂವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ಇಬ್ಬರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆ.ಎಫ್ ಡಿ ವಾರ್ಡ್ ನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಇನ್ನೋರ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಮೂವರೂ ಎನ್.ಆರ್.ಪುರದ ಮೇಗರಮಕ್ಕಿ ಗ್ರಾಮದವರಾಗಿದ್ದಾರೆ.

