ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ ಕೆಲವು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ,ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

