ಬೆಂಗಳೂರು: ರಾಜ್ಯಕ್ಕೆ ಮುಂಗಾರು ಮಳೆಯ ಪ್ರವೇಶವಾಗಿದ್ದು, ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮುಂಗಾರು ಮಳೆ ಆಗುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡದ ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಮುಂಗಾರು ಪ್ರವೇಶಿಸಿದ್ದು, ಉತ್ತಮ ಮಳೆಯಾಗುತ್ತಿದೆ. ಮೂರ್ನಾಲ್ಕು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ವ್ಯಾಪಿಸುವ ಸಾಧ್ಯತೆ ಇದೆ. ಗಾಳಿಯ ವೇಗ ಮತ್ತು ದಿಕ್ಕು ಆಧಾರದ ಮೇಲೆ ಒಂದೆರಡು ದಿನ ಹೆಚ್ಚು ಕಡಿಮೆ ಆಗಬಹುದು ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಬಾರಿ ವಾಡಿಕೆಗಿಂತ ಶೇಕಡ 10 ರಿಂದ 15 ರಷ್ಟು ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆ ಎನ್ನಲಾಗಿದೆ.

