ಬೆಂಗಳೂರು: ಮಹಿಳೆಯರ ಆರೋಗ್ಯ ಕಾಳಜಿಗೆ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಮಹಿಳೆಯರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗಿದೆ.
ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ನಟಿ ರಮ್ಯಾ ಜಂಟಿ ಸುದ್ದಿಗೋಷ್ಠಿ ನಡೆಸಿ ಯೋಜನೆ ಕುರಿತು ಮಾಹಿತಿ ನೀಡಿದರು.
ಮಹಿಳೆಯರ ಆರೋಗ್ಯ ಸಂಬಂಧಿತ ಸಮಸ್ಯೆಗಳ ಅಧ್ಯಯನ ಮತ್ತು ಪರಿಹಾರ ಕ್ರಮಗಳಿಗಾಗಿ ಮಹಿಳಾ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.
ಮಹಿಳೆಯರು ಎದುರಿಸುತ್ತಿರುವ ಮಾನಸಿಕ ಒತ್ತಡ, ಆರೋಗ್ಯ ಸಮಸ್ಯೆಗಳು ಸೇರಿದಂತೆ ವಿವಿಧ ಸವಾಲುಗಳ ಬಗ್ಗೆ ತಜ್ಞರು ಹಾಗೂ ಹಲವು ಗಣ್ಯರು ಸಲಹೆಗಳನ್ನು ನೀಡಿದ್ದಾರೆ. ಈ ಸಲಹೆಗಳ ಆಧಾರದ ಮೇಲೆ ಮಹಿಳೆಯರ ಆರೋಗ್ಯ ಸುಧಾರಣೆಗೆ ಅಗತ್ಯ ಯೋಜನೆಗಳನ್ನು ಸಮಿತಿ ರೂಪಿಸಲಿದೆ ಎಂದು ಹೇಳಿದರು.
‘ಋತುತಾರೆ’ ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟಿ ರಮ್ಯಾ ಅವರನ್ನು ನೇಮಕ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

