ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಮುಡಾ ಹಗರಣದ ತನಿಖೆ ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿತ್ತು. ಈ ಕ್ರಮ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ, ನೋಟಿಸ್ ಜಾರಿ ಮಾಡಿದೆ.
ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸರ್ಕಾರ, ಸಿಬಿಐ, ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಜಮೀನು ಮೂಲ ಮಾಲೀಕ ದೇವರಾಜು ಅವರಿಗೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಿದೆ.