ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೋಲಿಕೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ನನ್ನ ಹೇಳಿಕೆಯನ್ನು ದೊಡ್ಡ ವಿಷಯವನ್ನಾಗಿ ಮಾಡುವ ಅವಶ್ಯಕತೆ ಇಲ್ಲ. ಸಣ್ಣ ವಿಚಾರವನ್ನು ತೆಗೆದುಕೊಂಡು ಎಲ್ಲರೂ ಚರ್ಚೆ ಮಾಡುತ್ತಿದ್ದಾರೆ. ನಾನು ಯಾವುದೇ ದುರುದ್ದೇಶ ಇಟ್ಟುಕೊಂಡು ನಾಲ್ವಡಿ ಅವರಿಗೆ ಅಪಮಾನ ಮಾಡುವ ಉದ್ದೇಶದಿಂದ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ನಾಲ್ವಡಿ ಕೃಷ್ಣರಾಜ ಅವರು ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಸಾಧನೆ ಕಡಿಮೆ ಮಾಡಿ ನಮ್ಮ ಸರ್ಕಾರ ಹೆಚ್ಚು ಕೆಲಸ ಮಾಡಿದೆ ಎಂದು ನಾನು ಹೇಳಲು ಹೊರಟಿಲ್ಲ. ನಾಲ್ವಡಿ ಅವರನ್ನು ಬಿಟ್ಟರೆ ಮೈಸೂರಿಗೆ ಹೆಚ್ಚಿನ ಅನುದಾನ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದಷ್ಟೇ ತಿಳಿಸುವುದು ನನ್ನ ಉದ್ದೇಶವಾಗಿತ್ತು. ಬೇಕಿದ್ದರೆ ಅಂಕಿ ಅಂಶಗಳನ್ನು ಪರಿಶೀಲಿಸಲಿ. ನಮ್ಮ ತಂದೆ ಮೈಸೂರಿಗೆ ನೀಡಿದಷ್ಟು ಅನುದಾನವನ್ನು ಬೇರೆ ಯಾವ ಮುಖ್ಯಮಂತ್ರಿಯೂ ನೀಡಿಲ್ಲ. ಅದನ್ನೇ ನಾನು ಹೇಳಿದ್ದೇನೆ. ನನ್ನ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅಪಮಾನ ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ ಎಂದು ಯತೀಂದ್ರ ಹೇಳಿದ್ದಾರೆ.