ಮೈಸೂರು : ಮೈಸೂರಿನಲ್ಲಿ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಸಂಜೆ 4:42 ರಿಂದ 5 :06 ರೊಳಗೆ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಗಣ್ಯರು ಸೇರಿದಂತೆ ಲಕ್ಷಾಂತರ ಜನ ಜಂಬೂ ಸವಾರಿ ಕಣ್ತುಂಬಿಕೊಳ್ಳಲಿದ್ದಾರೆ. ಈ ಬಾರಿ ಜಂಬೂ ಸವಾರಿಯಲ್ಲಿ 58 ಸ್ತಬ್ದಚಿತ್ರಗಳು ಪ್ರದರ್ಶನಗೊಳ್ಳಲಿದೆ. 100ಕ್ಕೂ ಹೆಚ್ಚು ಕಲಾ ತಂಡಗಳು, 60ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, ಅಶ್ವಾರೋಹಿ ದಳ, ಪೊಲೀಸ್ ಬ್ಯಾಂಡ್ ಹಾಗೂ ಪೊಲೀಸ್ ತುಕಡಿಗಳು ಸಾಗಲಿವೆ.
ಕುಂಭ ಲಗ್ನದಲ್ಲಿ ಸಂಜೆ 4.42ರಿಂದ 5.06 ವರೆಗಿನ ಶುಭ ಮುಹೂರ್ತದಲ್ಲಿ ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಳ್ಳಲಿದೆ. 6ನೇ ಬಾರಿಗೆ ಅಭಿಮನ್ಯು ಚಿನ್ನದ ಅಂಬಾರಿಯನ್ನು ಹೊರಲಿದೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪಾ ಸಾಥ್ ನೀಡಲಿವೆ. ಜಂಬೂ ಸವಾರಿ ವೀಕ್ಷಣೆಗಾಗಿ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸುಮಾರು 45 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.