ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಡ್ರಗ್ಸ್ ಜಾಲ, ಡ್ರಗ್ಸ್ ಫ್ಯಾಕ್ಟರಿ ಪತ್ತೆ ಹೆಚ್ಚುವಲ್ಲಿ ವಿಫಲರಾದ ಸಿಸಿಬಿ ಪೊಲೀಸರ ವಿರುದ್ಧ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಖಡಕ್ ಕ್ರಮ ಕೈಗೊಂಡಿದ್ದಾರೆ.
ಮಾದಕ ವಸ್ತು ಜಾಲ ನಿಯಂತ್ರಿಸುವಲ್ಲಿ ಸಿಸಿಬಿ ಪೊಲೀಸರು ವಿಫಲರಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಪೊಲೀಸ್ ವಿಭಾಗದಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ.
ಮೈಸೂರಿನಲ್ಲಿ ಡ್ರಗ್ಸ್ ತಯಾರಿಕೆ ಹಾಗೂ ಮಾರಾಟ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮೈಸೂರಿನ ಹೆಬ್ಬಾಳದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣ, ಬೃಹತ್ ಡ್ರಗ್ಸ್ ಜಾಲ ಪತ್ತೆ ಮಾಡುವುವಲ್ಲಿ ಪೊಲೀಸರು ವಿಫಲರಾದ ಹಿನ್ನೆಲೆಯಲ್ಲಿ ಕಮಿಷನರ್ ಸೀಮಾ ಲಾಟ್ಕರ್, ಸಿಸಿಬಿಯ 10 ಸಿಬ್ಬಂದಿಯನ್ನು ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗಷ್ಟೇ ಮೈಸೂರು ನಗರದ ಹೆಬ್ಬಾಳದಲ್ಲಿ ಫಿನಾಯಿಲ್ ಫ್ಯಾಕ್ಟರಿಯ ಹೆಸರಲ್ಲಿ ನಡೆಸುತ್ತಿದ್ದ ಡ್ರಗ್ಸ್ ತಯಾರಕ ಘಟಕವನ್ನು ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಭೇದಿಸಿತ್ತು. ಮೊದಲಿಗೆ ಯಾವುದೇ ಮಾದಕ ವಸ್ತು ಸಿಕ್ಕಿಲ್ಲವೆಂಬ ಸುದ್ದಿಯಾಗಿತ್ತಾದರೂ ಎನ್ಸಿಬಿ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ ನಂತರ ಡ್ರಗ್ಸ್ ಪತ್ತೆಯಾಗಿರುವುದನ್ನು ಖಚಿತಪಡಿಸಿತ್ತು. ಈ ಪ್ರಕರಣ ಸಿಸಿಬಿಯ ನಿರ್ಲಕ್ಷ್ಯವನ್ನು ತೋರಿಸಿದ್ದು, ಇದರಿಂದ ಮುಜುಗರಕ್ಕೀಡಾದ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಸಿಸಿಬಿಯ ಸುಮಾರು 10 ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಸಾಕಷ್ಟು ವರ್ಷಗಳಿಂದ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಮೂಲ ಠಾಣೆಗಳಿಗೆ ಕಳುಹಿಸುವಂತೆ ಆದೇಶ ಹೊರಡಿಸಲಾಗಿದೆ. ಸಿಸಿಬಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಮೈಸೂರಿನಲ್ಲಿ ಡ್ರಗ್ಸ್ ಜಾಲವನ್ನು ಸಂಪೂರ್ಣ ನಿಯಂತ್ರಿಸಲಾಗುವುದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

