ನೆಲಮಂಗಲ/ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಚಂದನ ಹೊಸಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ದಿನವೇ (ಮಾರ್ಚ್ 19, 2026) ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಬಳಿ ಇರುವ ಬಿಲ್ಡಿಂಗ್‌ನ ನಾಲ್ಕನೇ ಮಹಡಿಯ ಮನೆಯೊಂದರಲ್ಲಿ ಈ ಸ್ಫೋಟ ಸಂಭವಿಸಿದೆ.ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಅಭಿನಂದನ್ ಶರ್ಮಾ, ಅಭಿಷೇಕ್ ಶರ್ಮಾ ಮತ್ತು ರಾಮ್ ಭಚನ್ ಶರ್ಮಾ ಎಂದು ಗುರುತಿಸಲಾಗಿದೆ. ಇವರು ಸೋಂಪುರ ಕೈಗಾರಿಕಾ ಪ್ರದೇಶದ ಮಾರುತಿ ಸುಜುಕಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳಾಗಿ ಕೆಲಸ ಮಾಡುತ್ತಿದ್ದರು.
ಮೇಲ್ನೋಟಕ್ಕೆ ಅಡುಗೆ ಅನಿಲ (LPG) ಸೋರಿಕೆಯಾಗಿ ಈ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳು ಪುಡಿಯಾಗಿದ್ದು, ಗೋಡೆಗಳಿಗೂ ಹಾನಿಯಾಗಿದೆ.
ಪೊಲೀಸ್ ಭೇಟಿ: ಘಟನಾ ಸ್ಥಳಕ್ಕೆ ಡಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

