ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 32 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ಸಮೀಪದ ಉಮ್ಮಡಹಳ್ಳಿ ಗೇಟ್ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಅಂಜನಾ ಎಂದು ಗುರುತಿಸಲಾಗಿದೆ. ಅವರು ತಮ್ಮ ಪತಿ ಹರೀಶ್ ಜೊತೆ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ವೇಗವಾಗಿ ಬಂದ ಕಾರು ಉಮ್ಮಡಹಳ್ಳಿ ಗೇಟ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಅಲ್ಲಿಂದ ಕೆಳಗೆ ಉರುಳಿ ಅಂಡರ್ಪಾಸ್ ಭಾಗಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸುವ ಸಂದರ್ಭದಲ್ಲಿ ಅಂಜನಾ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತು ಲ್ಯಾಪ್ಟಾಪ್ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕಾರು ಕೆಳಗೆ ಉರುಳುತ್ತಿದ್ದ ವೇಳೆ ಅದರ ವಿಂಡೋ ತೆರೆದಿದ್ದು, ಅಂಜನಾ ಕಾರಿನಿಂದ ಹೊರಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಅಂಜನಾ ಅವರ ಪತಿ ಹರೀಶ್ ಸಾಫ್ಟ್ವೇರ್ ಕಂಪನಿಯೊಂದನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

