ಮೈಸೂರು: ಕಾಪರ್ ವೈರ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧನವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ 7 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 1.17 ಲಕ್ಷದ ಕಾಪರ್ ವೈರ್ ವಶಕ್ಕೆ ಪಡೆಯಲಾಗಿದೆ.
ಬೈಲಕುಪ್ಪೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. 1.17 ಲಕ್ಷ ರೂ ಮೌಲ್ಯದ 90 ಕೆಜಿ ಕಾಪರ್ ವೈರ್ ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಕಳ್ಳತನಕ್ಕೆ ಬಳಸಿದ್ದ ಒಂದು ಕಾರು ಮತ್ತು ಉಪಕರಣಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿರುವ ಕಾಪರ್ ವೈರ್ ಗಳನ್ನು ಕಳ್ಳತನ ಮಾಡುತ್ತಿದ್ದರು. ಪಿರಿಯಾಪಟ್ಟಣ ತಾಲೂಕಿನ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದರು. ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

