ನವದೆಹಲಿ: ದೇಶಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿರುವ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ಶಿಕ್ಷಣ ಸಚಿವಾಲಯದಲ್ಲಿ ಮಹತ್ವದ ಆಡಳಿತಾತ್ಮಕ ಶಸ್ತ್ರಚಿಕಿತ್ಸೆ ನಡೆಸಿದೆ. ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಹುದ್ದೆಯಿಂದ ಎತ್ತಂಗಡಿ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮೊದಲ ಪ್ರಮುಖ ತಲೆದಂಡ ಇದಾಗಿದೆ.ಸಚಿವಾಲಯದ ಉನ್ನತ ಮಟ್ಟದ ಅಧಿಕಾರಿಯನ್ನೇ ವರ್ಗಾಯಿಸುವ ಮೂಲಕ ಕೇಂದ್ರ ಸರ್ಕಾರ ಅಕ್ರಮದ ವಿರುದ್ಧ ಕಟ್ಟುನಿಟ್ಟಿನ ಕ್ರಮದ ಸ್ಪಷ್ಟ ಮುನ್ಸೂಚನೆ ನೀಡಿದೆ.
ಪಂಚಾಯತ್ ರಾಜ್ ಇಲಾಖೆಗೆ ವಿನೀತ್ ಜೋಶಿ ವರ್ಗಾವಣೆ:
ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿ ಸಂಘಟನೆಗಳು ಹಾಗೂ ಪೋಷಕರು ಬೀದಿಗಿಳಿದು ನಡೆಸುತ್ತಿರುವ ಪ್ರತಿಭಟನೆ ಕಾವು ಪಡೆದುಕೊಳ್ಳುತ್ತಿದ್ದಂತೆಯೇ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ (ACC) ಈ ನಿರ್ಣಾಯಕ ಆದೇಶ ಹೊರಡಿಸಿದೆ.
ವಿನೀತ್ ಜೋಶಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿಕ್ಷಣ ಸಚಿವಾಲಯದ ಹುದ್ದೆಯಿಂದ ಬಿಡುಗಡೆಗೊಳಿಸಿದ್ದು, ಪಂಚಾಯತ್ ರಾಜ್ ಸಚಿವಾಲಯದ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ನರೇಶ್ ಪಾಲ್ ಗಂಗ್ವಾರ್ ಹೊಸ ಶಿಕ್ಷಣ ಕಾರ್ಯದರ್ಶಿ:
ತೆರವಾದ ಉನ್ನತ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜಿಸಲಾಗಿದೆ. ಗಂಗ್ವಾರ್ ಅವರು ಶೀಘ್ರದಲ್ಲೇ ನೂತನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಶೈಕ್ಷಣಿಕ ವಲಯದಲ್ಲಿ ಭಾರಿ ಸಂಚಲನ:
ಪ್ರಶ್ನೆಪತ್ರಿಕೆ ಸೋರಿಕೆ, ಗ್ರೇಸ್ ಅಂಕಗಳ ಹಂಚಿಕೆಯ ಗೊಂದಲ ಹಾಗೂ ಪರೀಕ್ಷಾ ನಿರ್ವಹಣೆಯಲ್ಲಿ ಎದುರಾದ ಗಂಭೀರ ಲೋಪದೋಷಗಳ ಕುರಿತು ತನಿಖೆ ಚುರುಕುಗೊಂಡಿದೆ. ಈ ನಿರ್ಣಾಯಕ ಹಂತದಲ್ಲೇ ಕೇಂದ್ರ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಯನ್ನು ಹುದ್ದೆಯಿಂದ ಎತ್ತಂಗಡಿ ಮಾಡಿರುವುದು ಶೈಕ್ಷಣಿಕ ಹಾಗೂ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

