ಪುಣೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿ, ಸಿಬಿಐಗೆ ಹಸ್ತಾಂತರಿಸಿದ್ದಾರೆ.
ಬಂಧಿತ ಆರೋಪಿಯನ್ನು ಮನಿಷಾ ವಾಗ್ಮಾರೆ (46) ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಸಿಬಿಐ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ನಗರ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಅವರು ಈ ಕುರಿತು ಮಾತನಾಡಿ, ಬಿಬ್ವೆವಾಡಿಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನಾವು ಆಕೆಯನ್ನು ಪ್ರಶ್ನಿಸಿ ಹೆಚ್ಚಿನ ತನಿಖೆಗಾಗಿ ಸಿಬಿಐಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದರು.
ಮೇ 3ರಂದು ನಡೆದ ನೀಟ್–ಯುಜಿ 2026 ಪರೀಕ್ಷೆ ರದ್ದುಗೊಳಿಸಲು ಕಾರಣವಾದ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಈ ಮಹಿಳೆಯ ಪಾತ್ರ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅವರು ನಿರಾಕರಿಸಿದ್ದಾರೆ.
ಇನ್ನು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ನಾಸಿಕ್ ಪೊಲೀಸರು ಈಗಾಗಲೇ ಶುಭಮ್ ಖೈರ್ ನರ್ ಹಾಗೂ ಧನಂಜಯ್ ಲೊಖಾಂಡೆ ಎಂಬ ಇಬ್ಬರನ್ನು ಬಂಧಿಸಿದ್ದರು. ಸದ್ಯ ಮೂವರನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ನೀಟ್ ಯುಜಿಸಿ ಪರೀಕ್ಷೆಯಲ್ಲಿ ದೊಡ್ಡ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಮೇ 3 ರಂದು ನಡೆಸಲಾಗಿದ್ದ ಪರೀಕ್ಷೆಯನ್ನು ರದ್ದು ಮಾಡಿ, ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಅಧಿಕೃತ ಆದೇಶದಲ್ಲಿ ತಿಳಿಸಿದೆ.
ಲಕ್ಷಾಂತರ ವಿದ್ಯಾರ್ಥಿಗಳು ಈ ಅಕ್ರಮದಿಂದ ಬಾಧಿತರಾಗಿರುವ ಕಾರಣ, ಪ್ರಕರಣವನ್ನು ವಿವರವಾದ ತನಿಖೆಗಾಗಿ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಕೇಂದ್ರ ಸರ್ಕಾರ ಹಸ್ತಾಂತರಿಸಿದೆ. ಎನ್‌ಟಿಎ ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತದೆ. ವಿಚಾರಣೆಗೆ ಅಗತ್ಯವಿರುವ ಎಲ್ಲ ದಾಖಲೆಗಳು, ಡಿಜಿಟಲ್ ಪುರಾವೆಗಳು ಮತ್ತು ಪರೀಕ್ಷೆಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

