HomeKarnatakaUpdate: ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ: ಯಾವಾಗ ಸಂಚಾರಕ್ಕೆ ಮುಕ್ತ?

Update: ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ: ಯಾವಾಗ ಸಂಚಾರಕ್ಕೆ ಮುಕ್ತ?

“ಚಿತ್ರದುರ್ಗ-ದಾವಣಗೆರೆ ನಡುವಿನ ನೇರ ರೈಲು ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ 2027ರ ಡಿಸೆಂಬರ್ ಅಂತ್ಯದ ವೇಳೆಗೆ ದಾವಣಗೆರೆ-ಚಿತ್ರದುರ್ಗ-ತುಮಕೂರು, ರಾಯದುರ್ಗ-ತುಮಕೂರು, ಗದಗ-ವಾಡಿ ಸೇರಿದಂತೆ ಹಲವು ರೈಲ್ವೆ ಮಾರ್ಗಗಳನ್ನು ಪೂರ್ಣಗೊಳಿಸಿ ಜನರ ಸೇವೆಗೆ ಅನುವು ಮಾಡಿಕೊಡಲಾಗುವುದು” ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಗುರುವಾರ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯ ಹಂಪನೂರು ಗ್ರಾಮದ ಬಳಿ ನೂತನ ರೈಲ್ವೆ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದ ಬಳಿಕ ಕೇಂದ್ರ ಸಚಿವ ವಿ.ಸೋಮಣ್ಣ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಈ ನೂತನ ರೈಲ್ವೆ ಯೋಜನೆಯ ಭೌತಿಕ ಕಾಮಗಾರಿ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೇವಲ 8-9 ರಷ್ಟು ಮಾತ್ರ ಕೆಲಸವಾಗಿದೆ. 2027ರ ಜನವರಿ ವೇಳೆಗೆ ಭರಮಸಾಗರ ವರೆಗಿನ ಹಾಗೂ ಜೂನ್ ವೇಳೆಗೆ ಚಿತ್ರದುರ್ಗದ ವರೆಗಿನ ರೈಲ್ವೆ ಮಾರ್ಗದ ಕಾಮಗಾರಿ ಪೂರ್ಣಗೊಳಿಸಿ, ರೈಲು ಸಂಚಾರಕ್ಕೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಯೋಜನೆ ಈ ಭಾಗದ ಜನರ ಬಹುಕಾಲದ ಕನಸು, ಈ ಮಹತ್ವಾಕಾಂಕ್ಷೆಯ ಯೋಜನೆಯಿಂದ ದಾವಣಗೆರೆ ಮತ್ತು ಬೆಂಗಳೂರು ನಡುವಿನ ಪ್ರಯಾಣದ ದೂರ ಸುಮಾರು 80 ಕಿಲೋಮೀಟರ್‌ಗಳಷ್ಟು ಕಡಿಮೆಯಾಗಲಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ” ಎಂದು ಹೇಳಿದರು.

ಈ ಭಾಗದ ಜನರ ದಶಕಗಳ ಬೇಡಿಕೆಯಾಗಿದ್ದ ಯೋಜನೆಗೆ ರಾಜ್ಯ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸಂಪೂರ್ಣ ಸಹಕಾರ ನೀಡುತ್ತಿದೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹಳಿ ನಿರ್ಮಾಣ ಮತ್ತು ಇತರ ತಾಂತ್ರಿಕ ಕೆಲಸಗಳ ವೇಗದ ಬಗ್ಗೆ ಸಚಿವರು ತೃಪ್ತಿ ವ್ಯಕ್ತಪಡಿಸಿದರು.

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವಂತೆ ಎಂಜಿನಿಯರ್‌ಗಳಿಗೆ ಸೂಚಿಸಿದ ಅವರು, ಈ ಮಾರ್ಗವು ಕಾರ್ಯಾರಂಭ ಮಾಡಿದರೆ ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಮಗಾರಿ ಚುರುಕುಗೊಳಿಸಲು ಹಾಗೂ ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವಂತೆ ರೈಲ್ವೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದ ಸಚಿವ ವಿ.ಸೋಮಣ್ಣ, ಇನ್ನು ಮುಂದೆ ಪ್ರತಿ ತಿಂಗಳು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ಭೂ ಸ್ವಾಧೀನ: “ರೈಲ್ವೆ ಯೋಜನೆಗೆ ಅಗತ್ಯ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ವಿಶೇಷ ಭೂಸ್ವಾಧೀನಾಧಿಕಾರಿ ಪೂರ್ಣಗೊಳಿಸಬೇಕು. ಭರಮಸಾಗರ-ಚಿತ್ರದುರ್ಗ ನಡುವಿನ 28 ಕಿ.ಮೀ. ರೈಲ್ವೇ ಮಾರ್ಗದ ನಡುವೆ ಯಾವುದೇ ಭೂ ಸ್ವಾಧೀನ ಪ್ರಕ್ರಿಯೆ ಬಾಕಿ ಉಳಿಸಿಬಾರದು. ಇರುವ ಸಣ್ಣ ಪುಟ್ಟ ತೊಂದರೆಗಳನ್ನು ಶೀಘ್ರವೇ ಪರಿಹರಿಸಬೇಕು. ಈ ನಿಟ್ಟಿನಲ್ಲಿ ಅನಗತ್ಯ ವಿಳಂಬ ಮಾಡುವುದು ಬೇಡ” ಎಂದು ವಿ.ಸೋಮಣ್ಣ ಹೇಳಿದರು.

ಸಂಸದ ಗೋವಿಂದ ಎಂ. ಕಾರಜೋಳ ಮಾತನಾಡಿ, ನೇರ ರೈಲ್ವೆ ಕಾಮಗಾರಿ ವೇಗವು ಅತ್ಯಂತ ನಿಧಾನಗತಿಯಲ್ಲಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೆಲಸದಲ್ಲಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಅಂತಹವರಿಗೆ ಕೂಡಲೇ ನೋಟಿಸ್ ಜಾರಿ ಮಾಡಬೇಕು. ಕಾಮಗಾರಿ ತ್ವರಿತ ಗೊಳಿಸಿ ನಿಗದಿತ ಅವಧಿಯಲ್ಲಿ ಕೆಲಸ ಮುಗಿಸಬೇಕು ಎಂದು ತಿಳಿಸಿದರು.

2027ರ ವೇಳೆಗೆ ದಾವಣಗೆರೆ-ಚಿತ್ರದುರ್ಗ-ತುಮಕೂರು ನಡುವಿನ ನೂತನ ನೇರ ರೈಲ್ವೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿಕೊಡುವುದಾಗಿ ಮಂತ್ರಿಗಳು ಹಾಗೂ ಅಧಿಕಾರಿಗಳು ಭರವಸೆ ನೀಡಿದ್ದು, ನಿಗದಿತ ಕಾಲಮಿತಿಯೊಳಗೆ ಅಭಿವೃದ್ಧಿ ಕೆಲಸಗಳು ಮುಗಿಯುವ ವಿಶ್ವಾಸ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular