ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಾಯಕರು ಪ್ರತ್ಯೇಕವಾಗಿ ಹೋರಾಟ ಆರಂಭಿಸಿದ್ದಾರೆ. ಒಂದೆಡೆ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಿದ್ದರೆ, ಮತ್ತೊಂದೆಡೆ ಜೆಡಿಎಸ್ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆ ಯತ್ನ ನಡೆಸಿದೆ.
ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಾಂಗ್ರೆಸ್ ಸರ್ಕಾರದ ದರ ಏರಿಕೆ ನೀತಿ ಹಾಗೂ ಭ್ರಷ್ಟಾಚಾರದ ವಿರುದ್ಧ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಸಂಸದರಾದ ಮಲ್ಲೇಶ್ ಬಾಬು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ಅನೇಕ ನಾಯಕರು ಅಸಂಖ್ಯಾತ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ರಾಜ್ಯ ಐದು ಗ್ಯಾರಂಟಿ ಕೊಟ್ಟಿದೆ ನಿಜ. ಆದರೆ, ಗ್ಯಾರಂಟಿ ಪಡೆದ ಪಾಪಕ್ಕೆ ಜನರು ದಿನನಿತ್ಯ ಬೆಲೆ ಏರಿಕೆ ಬರೆಗೆ ತುತ್ತಾಗುತ್ತಿದ್ದಾರೆ. ದಿನಕ್ಕೊಂದು ದರ ಏರಿಕೆ ಮಾಡುತ್ತಿದ್ದಾರೆ. ಕೊಟ್ಟಿದ್ದು ಅಲ್ಪ, ಜನರ ಮೇಲೆ ಬೆಟ್ಟದಷ್ಟು ಹೇರಿಕೆ ಮಾಡಿದ್ದಾರೆ. ಇದನ್ನು ಸಹಿಸುವ ಅಗತ್ಯ ಇಲ್ಲ. ಜನರು ಸರ್ಕಾರದ ವಿರುದ್ಧ ದಂಗೆ ಏಳದೇ ಬೇರೆ ದಾರಿ ಇಲ್ಲ ಎಂದು ಗುಡುಗಿದರು.
ಪ್ರತಿಭಟನಾ ಸಭೆ ಬಳಿಕ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಾಯಕರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರಿಗೆ ಪೊಲೀಸರು ತಡೆಯೊಡ್ಡಿದರು. ಪೊಲೀಸರು ಹಾಗೂ ಜೆಡಿಎಸ್ ನಾಯಕರ ನಡುವೆ ವಾಅಗ್ವಾದ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಶಾಸಕರು, ಮುಖಂಡರನ್ನು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದರು.