HomeKarnatakaನವೆಂಬರ್ 1 ಕನ್ನಡಿಗರ ಸ್ವಾಭಿಮಾನ ದಿನವಾದ Karnataka Rajyotsava

ನವೆಂಬರ್ 1 ಕನ್ನಡಿಗರ ಸ್ವಾಭಿಮಾನ ದಿನವಾದ Karnataka Rajyotsava

ಬೆಂಗಳೂರು- ಕನ್ನಡಿಗರ ಪಾಲಿಗೆ ನವೆಂಬರ್ 1 ಕೇವಲ ಒಂದು ದಿನಾಂಕವಲ್ಲ. ಇದು ನಮ್ಮ ನಾಡಿನ ಇತಿಹಾಸ, ಭಾಷೆಯ ಅಸ್ತಿತ್ವ, ಸಂಸ್ಕೃತಿಯ ವೈಭವ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತದ ದಿನ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು” ಎಂದು ಕವಿ ಹುಯಿಲಗೋಳ ನಾರಾಯಣರಾಯರು ರಚಿಸಿದ ಕವಿತೆ ಕನ್ನಡ ನಾಡು-ನುಡಿಯ ಹೋರಾಟದ ಗೀತೆಯಾಗಿ ಉಳಿದಿದೆ. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದಲ್ಲಿ ಗಂಗೂಬಾಯಿ ಹಾನಗಲ್ ಅವರು ಈ ಗೀತೆಯನ್ನು ಹಾಡಿದ್ದರು. ಹರಿದು ಹಂಚಿಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಒಂದುಗೂಡಿಸುವ ಕರ್ನಾಟಕ ಏಕೀಕರಣ ಚಳವಳಿಗೆ ಈ ಗೀತೆ ಮಹತ್ವದ ಪ್ರೇರಣೆಯಾಯಿತು ಎಂದು ಸ್ಮರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವಿದೆ. ವಿಶ್ವಗುರು ಬಸವಣ್ಣ, ಆದಿಕವಿ ಪಂಪ, ರನ್ನ, ಕುಮಾರವ್ಯಾಸ ಸೇರಿದಂತೆ ಅನೇಕ ಮಹನೀಯರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿರುವುದು ಭಾಷೆಯ ಪ್ರಾಚೀನತೆ ಮತ್ತು ಸಾಹಿತ್ಯಿಕ ಶ್ರೀಮಂತಿಕೆಗೆ ಸಂದ ಗೌರವವಾಗಿದೆ ಎಂದರು.

1956ರ ನವೆಂಬರ್ 1ರಂದು ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ವಿಶಾಲ ಮೈಸೂರು ರಾಜ್ಯ ರಚಿಸಲಾಯಿತು. ನಂತರ 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದರು ಎಂದು ತಿಳಿಸಿದರು.

1.16 ಕೋಟಿ ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ

ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ 1.16 ಕೋಟಿ ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ನಾಡು, ನುಡಿ, ನೆಲ, ಜಲ ಮತ್ತು ಸಂಸ್ಕೃತಿಯ ಬಗ್ಗೆ ಗೌರವ ಮೂಡಿಸುವ ಕಾರ್ಯವನ್ನು ಪಠ್ಯಪುಸ್ತಕಗಳ ಮೂಲಕ ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.

ಶಿಕ್ಷಕರ ನೇಮಕಾತಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ. ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ 17 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಂಡರೆ ಸರ್ಕಾರದ ಅವಧಿಯಲ್ಲಿ ಒಟ್ಟು ಸುಮಾರು 32 ಸಾವಿರ ಶಿಕ್ಷಕರ ನೇಮಕಾತಿ ಮಾಡಿದಂತಾಗಲಿದೆ ಎಂದು ತಿಳಿಸಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ‘ವಿದ್ಯಾರ್ಥಿ ಸಹಾಯಹಸ್ತ’

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಶೇ.7.5ರಷ್ಟು ವಿಶೇಷ ಮೀಸಲಾತಿ ಕಲ್ಪಿಸುವ ‘ವಿದ್ಯಾರ್ಥಿ ಸಹಾಯಹಸ್ತ’ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಓದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಇದು ಮಹತ್ವದ ಕ್ರಮವಾಗಿದೆ ಎಂದರು.

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಕೃಷಿ ಪದ್ಧತಿ, ಗ್ರಾಮೀಣ ಸಂಸ್ಕೃತಿ ಹಾಗೂ ಶ್ರಮಜೀವನದ ನೈಜ ಪರಿಚಯ ಮಾಡಿಕೊಡುವ ಉದ್ದೇಶದಿಂದ ‘ಗ್ರಾಮಾನುಭವ’ ಎಂಬ ವಿನೂತನ ಶೈಕ್ಷಣಿಕ ಕಾರ್ಯಕ್ರಮ ರೂಪಿಸಲಾಗಿದೆ. ಈ ಯೋಜನೆಯಡಿ 8, 9 ಮತ್ತು 11ನೇ ತರಗತಿಯ ನಗರ ಪ್ರದೇಶದ ವಿದ್ಯಾರ್ಥಿಗಳು ಗ್ರಾಮಗಳಿಗೆ ಭೇಟಿ ನೀಡಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ಗ್ರಾಮೀಣ ಬದುಕಿನ ಅನುಭವ ಪಡೆಯಲಿದ್ದಾರೆ ಎಂದು ಹೇಳಿದರು.

1,200ಕ್ಕೂ ಹೆಚ್ಚು ಕೆಪಿಎಸ್ ಶಾಲೆಗಳ ಸ್ಥಾಪನೆ

ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿ 1,200ಕ್ಕೂ ಹೆಚ್ಚು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಸ್ಥಾಪಿಸಲಾಗುತ್ತಿದೆ. ಇದರೊಂದಿಗೆ ಸಿಎಸ್‌ಆರ್‌ ಅನುದಾನದ ನೆರವಿನಿಂದಲೂ ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು.

ಶಿಕ್ಷಕರ ಅಮೂಲ್ಯ ಸೇವೆಯನ್ನು ಗೌರವಿಸುವ ಉದ್ದೇಶದಿಂದ 2026ರ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಿಕ್ಷಕರು ತಮ್ಮ ಹೆಸರಿನ ಹಿಂದೆ ಹೆಮ್ಮೆಯಿಂದ ‘Tr.’ (Teacher) ಎಂದು ಬಳಸಲು ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ ಎಂದರು.

ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಲು ಮನವಿ

1995ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು.

“ರಾಜ್ಯೋತ್ಸವದ ದಿನದಂದು ಮುಖ್ಯಮಂತ್ರಿಗಳು ಈ ಕುರಿತು ಘೋಷಣೆ ಮಾಡಿದರೆ ಅದು ಇತಿಹಾಸ ಸೃಷ್ಟಿಸಿದಂತಾಗುತ್ತದೆ” ಎಂದು ಹೇಳಿದರು.

ಕನ್ನಡ ಭಾಷೆ, ಕನ್ನಡ ಶಾಲೆಗಳು ಮತ್ತು ಕನ್ನಡಿಗರ ಉಳಿವಿಗಾಗಿ ಸರ್ಕಾರ ಶ್ರಮಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಬೇಕು. ಕನ್ನಡ ಶಾಲೆಗಳು ಉಳಿಯಬೇಕು, ಕನ್ನಡಿಗರಿಗೆ ಉದ್ಯೋಗಾವಕಾಶಗಳು ಹೆಚ್ಚಾಗಬೇಕು ಹಾಗೂ ಆಡಳಿತದ ಪ್ರತಿಯೊಂದು ಹಂತದಲ್ಲೂ ಕನ್ನಡಕ್ಕೆ ಗೌರವ ದೊರೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.

“ನಾವು ಕನ್ನಡಿಗರು ಎಂಬುದು ಕೇವಲ ನಮ್ಮ ಗುರುತಾಗಬಾರದು; ಅದೊಂದು ಹೆಮ್ಮೆಯ ಬದುಕಾಗಬೇಕು. ಕನ್ನಡ ನಮ್ಮ ಉಸಿರಾಗಲಿ, ಕನ್ನಡ ನಮ್ಮ ಬದುಕಾಗಲಿ, ಕನ್ನಡ ನಮ್ಮ ಮುಂದಿನ ಪೀಳಿಗೆಯ ಭವಿಷ್ಯವಾಗಲಿ” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತನಾಡಿದರು. 71ನೇ ಕನ್ನಡ ರಾಜ್ಯೋತ್ಸವ ವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಕ್ಕೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಚಿವ ಮಧು ಬಂಗಾರಪ್ಪ ಅವರನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್, ಎ.ಪಿ. ರಂಗನಾಥ್, ಗಣೇಶ್ ಹುಕ್ಕೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ವಿದ್ಯಾಕುಮಾರಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular