ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ದೂರು ನೀಡಿದ್ದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೇಳಿಕೆ ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿದ ವಿಜಯಲಕ್ಷ್ಮಿ ಅವರನ್ನು ಸೈಬರ್ ಠಾಣೆ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ದೂರಿನಲ್ಲಿ ಪ್ರಸ್ತಾಪಿಸಿದ ಅಂಶಗಳನ್ನೇ ವಿಚಾರಣೆ ವೇಳೆಯೂ ಹೇಳಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿನ ತಮ್ಮ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಆ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದ ಅವಹೇಳನಕಾರಿ ಮತ್ತು ಅಶ್ಲೀಲ ಸಂದೇಶಗಳನ್ನು ಡಿಲೀಟ್ ಮಾಡಿದ್ದಾರೆ.
ಒಟ್ಟಾರೆ 18 ಇನ್ಸ್ಟಾಗ್ರಾಮ್ ಖಾತೆಗಳಲ್ಲಿ ವಿಜಯಲಕ್ಷ್ಮಿ ಮತ್ತು ಅವರ ಕುಟುಂಬದ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಹಾಕಲಾಗಿತ್ತು. ಆರೋಪಿಗಳು ಖಾತೆಗಳನ್ನು ಸ್ಥಗಿತಗೊಳಿಸುವ ಮೊದಲೇ ಅವುಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ.

