HomeKarnatakaಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಡ್ರಗ್ ಫ್ರೀ ಕ್ಯಾಂಪಸ್’ ನೀತಿ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ

ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಡ್ರಗ್ ಫ್ರೀ ಕ್ಯಾಂಪಸ್’ ನೀತಿ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ

ಮಡಿಕೇರಿ: ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ‘ಡ್ರಗ್ ಫ್ರೀ ಕ್ಯಾಂಪಸ್’ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.     

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಕೇಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಸಭೆಯಲ್ಲಿ 2026ನೇ ಸಾಲಿನ ಏಪ್ರಿಲ್ ಮಾಹೆಯಲ್ಲಿ ನಡೆದ ಜಿಲ್ಲಾ ಮಟ್ಟದ ದ್ರವ್ಯ ಸಮನ್ವಯ ಕೇಂದ್ರ ಸಭೆಯ ನಡಾವಳಿಯ ಅಂಶಗಳಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.   

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಮಾತನಾಡಿ, ಪೊಲೀಸ್ ಇಲಾಖೆಯು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಇಲ್ಲಿಯವರೆಗೂ 186 ಎನ್‍ಡಿಪಿಎಸ್ ಪ್ರಕರಣ ದಾಖಲಿಸಲಾಗಿದೆ ಎಂದರು.

ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಠಾಣಾ ವ್ಯಾಪ್ತಿಯಲ್ಲಿರುವ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಟ ಮಾಡುವುದರಿಂದಾಗುವ ದುಷ್ಪರಿಣಾಮಗಳ ಹಾಗೂ ಕಾನೂನು ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಜಾಗೃತಿ ಕಾರ್ಯಕ್ರಮಗಳು, ಬೀದಿ ನಾಟಕ ಮತ್ತು ಮ್ಯಾರಥಾನ್ ಜಾಥ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿರುವ ಪುನರಾವರ್ತಿತ ಪೆಡ್ಲರ್‍ಗಳ ಮೇಲೆ ಠಾಣಾ ವ್ಯಾಪ್ತಿಯಲ್ಲಿ ನಿಗಾ ಇಡಲಾಗಿದೆ. ಜಿಲ್ಲೆಯಲ್ಲಿ ವ್ಯಸನ ಮುಕ್ತರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಪುನರ್ವಸತಿ ಕೇಂದ್ರದ ಅಗತ್ಯ ಇದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಖಾಸಗಿ ಅಥವಾ ಸರ್ಕಾರಿ ಪುನರ್ವಸತಿ ಕೇಂದ್ರ ಹಾಗೂ ಸರ್ಕಾರಿ ಕಟ್ಟಡ ದೊರೆತಲ್ಲಿ ಪುನರ್ವಸತಿ ಕೇಂದ್ರ ತೆರೆಯಬಹುದು ಎಂದರು.

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಎಲ್ಲಾ ಜಿಲ್ಲೆಗಳಲ್ಲಿ ಪುನರ್ವಸತಿ ಕೇಂದ್ರಗಳಿವೆ. ಜಿಲ್ಲೆಯಲ್ಲೂ ಅಗತ್ಯ ಇರುವುದರಿಂದ ಅನುದಾನವನ್ನು ಕಲ್ಪಿಸಲಾಗುವುದು. ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾದಕ ವಸ್ತುಗಳ ಸೇವನೆಗೆ ಒಳಪಟ್ಟ ವ್ಯಕ್ತಿಗಳನ್ನು ದುಶ್ಚಟದಿಂದ ವಿಮುಕ್ತಿಗೊಳಿಸುವ ಉದ್ದೇಶದಿಂದ ಜಿಲ್ಲಾಸ್ಪತ್ರೆಯಲ್ಲಿ ತಾತ್ಕಾಲಿಕ ಸ್ಥಾಪಿತಗೊಂಡಿರುವ ವ್ಯಸನಮುಕ್ತ ಕೇಂದ್ರಕ್ಕೆ ನಿಯೋಜಿತ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿವರವನ್ನು ಪೊಲೀಸ್ ಇಲಾಖೆಗೆ ಸಲ್ಲಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಈಗಾಗಲೇ ಗುರುತಿಸಲ್ಪಟ್ಟಿರುವ ಮಾದಕ ವ್ಯಸನಿಗಳನ್ನು ಸಂಬಂಧಿತ ವ್ಯಸನಮುಕ್ತ ಕೇಂದ್ರಕ್ಕೆ ಹಾಜರುಪಡಿಸಿ, ಅವರಿಗೆ ನಿಯಮಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು.

ಅಲ್ಲದೇ ಆರೋಗ್ಯ ಇಲಾಖೆಯು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಈಗಾಗಲೇ ವಿತರಿಸುತ್ತಿರುವ ಡ್ರಗ್ ಟೆಸ್ಟ್ ಕಿಟ್‍ಗಳು ಸಂಪೂರ್ಣವಾಗಿ ಬಳಕೆಯಾಗುತ್ತಿದ್ದು, ಕಾಲಕಾಲಕ್ಕೆ ಕಿಟ್‍ಗಳನ್ನು ಪೂರೈಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿರುವುದಾಗಿ ಮಾಹಿತಿ ನೀಡದರು.

 ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ, ಪ್ರವಾಸೋದ್ಯಮ, ಕಂದಾಯ ಮತ್ತು ಪೊಲೀಸ್ ಇಲಾಖೆಯವರು ಜಂಟಿಯಾಗಿ ಜಿಲ್ಲೆಯಲ್ಲಿರುವ ಹೋಂಸ್ಟೇ, ರೆಸಾರ್ಟ್, ಹೊಟೇಲ್‍ಗಳಲ್ಲಿ ಕೆಲಸ ಮಾಡುವವರು ಹೆಚ್ಚು ಹೊರ ರಾಜ್ಯದ ಕಾರ್ಮಿಕರಾಗಿದ್ದು, ಅನಿರೀಕ್ಷಿತರವಾಗಿ ದಾಳಿ ನಡೆಸಿ ಮಾಲೀಕರೊಂದಿಗೆ ಸಭೆ ನಡೆಸಿ ಅನುಮಾನಸ್ಪದ ಕೆಲಸಗಾರರ ಬಗ್ಗೆ ಮಾಹಿತಿ ಪಡೆದು ಮಾದಕ ವಸ್ತು ಸೇವನೆಯ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತನಾಡಿ, ಈ ಸಂಬಂಧ ಪೋಷಕರಿಂದ ಮುಚ್ಚಳಿಕೆ ಪತ್ರವನ್ನು ಪಡೆಯುವ ಪ್ರಕ್ರಿಯೆಯನ್ನು ಜಾರಿಗೆ ತರಲು ಸಂಬಂಧಪಟ್ಟ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಿಗೆ ಸೂಕ್ತ ಮಾರ್ಗದರ್ಶನ ನೀಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ವಿಶೇಷ ಉಪನ್ಯಾಸಗಳು, ಕಾರ್ಯಾಗಾರಗಳು ಹಾಗೂ ಸಂವಾದ ಕಾರ್ಯಕ್ರಮ ಆಯೋಜಿಸುವುದು. ಶಿಕ್ಷಕರಿಗೆ ಮಾದಕ ವ್ಯಸನ ಗುರುತಿಸುವಿಕೆ ಹಾಗೂ ವಿದ್ಯಾರ್ಥಿಗಳ ಮಾರ್ಗದರ್ಶನ ಕುರಿತು ತರಬೇತಿ ನೀಡಲಾಗುವುದು, ವಿದ್ಯಾರ್ಥಿಗಳ ಹಾಜರಾತಿ, ವರ್ತನೆ ಹಾಗೂ ಶೈಕ್ಷಣಿಕ ಪ್ರಗತಿಯ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಿ, ವ್ಯಸನದ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸಂಬಂಧಪಟ್ಟ ಪೆÇಲೀಸ್ ಠಾಣೆಗಳಿಗೆ ಮಾಹಿತಿ ನೀಡಿ ಡ್ರಗ್ ಟೆಸ್ಟ್ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಜಿಲ್ಲಾ ಔಷಧ ನಿಯಂತ್ರಣ ಇಲಾಖೆ ಸಿಬ್ಬಂದಿ ಮಾತನಾಡಿ, ಜಿಲ್ಲೆಯಲ್ಲಿರುವ ಮೆಡಿಕಲ್ ಶಾಪ್‍ಗಳಲ್ಲಿ ನಿಷೇಧಿತ ಮಾರಾಟ ಮತ್ತು ವೈದ್ಯಾಧಿಕಾರಿಗಳ ಸಲಹೆ ಚೀಟಿಯಿಲ್ಲದೇ ಔಷದ ವಿತರಣೆಯಿಲ್ಲದಿರುವ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಸಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ನಿಷೇದಿತ ಜೌಷಧಿಗಳ ಮಾರಾಟ ಮಾಡುವ ಮೆಡಿಕಲ್ ಶಾಪ್‍ಗಳಿಗೆ ದಾಳಿ ಮಾಡಿ ಕಾನೂನು ಕ್ರಮ ಕೈಗೊಳ್ಳುವುತ್ತಿರುವುದಾಗಿ ಮಾಹಿತಿ ನೀಡಿದರು.

ಅಬಕಾರಿ ಇಲಾಖೆಯ ನಿರೀಕ್ಷಕರಾದ ಹೆಚ್.ಸಂತೋಷ್ ಕುಮಾರ್ ಮಾತನಾಡಿ, ಪ್ರಸ್ತುತ ಜಿಲ್ಲೆಯಲ್ಲಿರುವ ಮದ್ಯದಂಗಡಿಗಳು, ಬಾರ್‍ಗಳು, ಕ್ಲಬ್‍ಗಳು, ರೆಸಾರ್ಟ್‍ಗಳ ಮೇಲೆ ನಿರಂತರವಾಗಿ ತಪಾಸಣೆ ಕೈಗೊಳ್ಳಲಾಗುತ್ತಿದೆ. ಗುಪ್ತವಾಗಿ ಮಾಹಿತಿ ಸಂಗ್ರಹಿಸಿ ಪೆÇಲೀಸ್ ಇಲಾಖೆಯೊಂದಿಗೆ ಜಂಟಿಯಾಗಿ ಕಾರ್ಯಚರಣೆ ಕೈಗೊಳ್ಳುವುದು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ತಮ್ಮ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಗಳ ಬಗ್ಗೆ ಆರೋಗ್ಯ ಮತ್ತು ಪೆÇಲೀಸ್ ಇಲಾಖೆಯೊಂದಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜೊತೆಗೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ವೈದ್ಯಕೀಯ ತಪಾಸಣೆಗಳನ್ನು ನಡೆಸುವುದರ ಜೊತೆಗೆ ಡ್ರಗ್ ಟೆಸ್ಟ್‍ಗಳನ್ನು ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

ಸಭೆಯಲ್ಲಿ ಅರಣ್ಯ ಇಲಾಖೆಯ ಅಧೀಕ್ಷಕರಾದ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಸಹಾನ ಎಸ್.ಹಾದಿಮನಿ,  ಡಿಡಿಪಿಯು ಪಿ.ಅರ್.ವಿಜಯ, ಡಿಡಿಪಿಐ ಬಸವರಾಜು, ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಪಿ.ಎನ್.ಸೋಮಣ್ಣ, ಕಾರಾಗೃಹ ಅಧಿಕಾರಿ ಸಂಜಯ್ ಕುಮಾರ್, ಸಹಾಯಕ ಡ್ರಗ್ ನಿಯಂತ್ರಕರಾದ ಹೆಚ್.ಎಂ.ಹರೀಶ್, ಹಿರಿಯ ಪೊಲೀಸ್ ಅಧಿಕಾರಿ ಮೇದಪ್ಪ ಇತರರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular