ನವದೆಹಲಿ: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗಳಿಸಲಾಗಿದ್ದು, ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಭಾರತದ ದಾಳಿ ಬೆನ್ನಲ್ಲೇ ಪಾಕಿಸ್ತಾನ ದಾಳಿ ನಿಲ್ಲಿಸದಿದ್ದರೆ ಪ್ರತಿದಾಳಿ ಎಚ್ಚರಿಕೆ ನೀಡಿದೆ.
ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಭಾರತೀಯ ಸೇನೆ ಆಪರೇಷನ್ ಅಭ್ಯಾಸ್ ಸಮರಾಭ್ಯಾಸ ಆರಂಭಿಸಿದೆ. ಮತ್ತೊಂದೆಡೆ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗಡಿ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ.
ನವದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಗಡಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಅಮಿತ್ ಶಾ ಸಭೆ ನಡೆಸಿದ್ದು, ರಾಜ್ಯಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಭದ್ರತೆ ಹೆಚ್ಚಳಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಜಮ್ಮು-ಕಾಶ್ಮೀರ, ಪಂಜಾಬ್, ರಾಜಸ್ಥಾನ, ಗುಜರಾತ್, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಸಿಕ್ಕಿಂ, ಪಶ್ಚಿಮ ಬಂಗಾಳ ಸೇರಿದಂತೆ 9 ರಾಜ್ಯಗಳ ಮುಖ್ಯಮಂತ್ರಿಗಳು, ಅಧಿಕಾರಿಗಳು ಭಾಗಿಯಾಗಿದ್ದಾರೆ.