ಬೆಂಗಳೂರು: ಪಾಕಿಸ್ತಾನದ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆಯ ಒಳಿತಿಗಾಗಿ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.
ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಸೈನಿಕರ ಹೆಸರಲ್ಲಿ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಮುಜರಾಯಿ ಇಲಾಖೆ ಸೂಚನೆ ಮೇರೆಗೆ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅದಿದೇವತೆ ಚಾಮುಂಡಿ ತಾಯಿ, ನಂಜನಗೂಡಿನ ನಂಜುಂಡೇಶ್ವರ, ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಿ, ಬೆಂಗಳೂರಿನ ಇತಿಹಾಸಪ್ರಸಿದ್ಧ ಗವಿಗಂಗಾಧರೇಶ್ವರ, ಶ್ರೀರಂಗಪಟ್ಟಣದ ನಿಮಿಷಾಂಬಾ, ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ, ಕಾಡುಮಲ್ಲೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.
ಇನ್ನು ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶತ್ರು ಸಂಹಾರಕ್ಕಾಗಿ ದುರ್ಗಾ ಹೋಮ ಮಾಡಲಾಗುತ್ತಿದೆ. ಸೈನ್ಯಕ್ಕೆ ಬಲ ಸಿಗಲಿ ಉಗ್ರ ಸಂಹಾರವಾಗಲಿ ಎಂದು ಈ ಹೋಮ ಮಾಡಲಾಗುತ್ತಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ತಿಳಿಸಿದ್ದಾರೆ.