ಬೆಂಗಳೂರು : ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವುದೇ ಕ್ಷಣದಲ್ಲಿ ವಿಕೋಪ ಪರಿಸ್ಥಿತಿ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಸೂಚಿಸಲಾಗಿದೆ. ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡುವ ಬಗ್ಗೆ ಸಚಿವರಾದ ರಾಮಲಿಂಗಾರೆಡ್ಡಿಯವರು ನನ್ನೊಂದಿಗೆ ಚರ್ಚೆ ನಡೆಸಿ, ಕ್ರಮ ಕೈಗೊಂಡಿದ್ದಾರೆ ಎಂದರು.
ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲಿನ ನಮ್ಮ ಸೈನ್ಯದ ದಾಳಿಗೆ ಇಡೀ ಕರ್ನಾಟಕ ಬೆಂಬಲವಾಗಿ ನಿಂತಿದೆ. ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳನ್ನು ಪೂರ್ಣ ಹತ್ತಿಕ್ಕಲು ನಾವು ಒಗ್ಗಟ್ಟಾಗಿ ಶ್ರಮಿಸಲಿದ್ದೇವೆ. ದೇಶದ ಸಾರ್ವಭೌಮತ್ವ ಹಾಗೂ ಭದ್ರತೆಯ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.