“ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ ಹಾಗೂ 55ನೇ ವರ್ಷದ ಸಂಭ್ರಮಾಚರಣೆ ಆಯೋಜನೆ ಮಾಡಿತ್ತು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಧು ಬಂಗಾರಪ್ಪ ಮಾತನಾಡಿದರು.
“ಕಳೆದ 2 ವರ್ಷಗಳಲ್ಲಿ ಸುಮಾರು 14,499 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಉತ್ತರ ಕರ್ನಾಟಕ ಭಾಗದ ಶಿಕ್ಷಕರು ಎದುರಿಸುತ್ತಿದ್ದ ವರ್ಗಾವಣೆ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಶಿಕ್ಷಕ ಸ್ನೇಹಿ ಆಡಳಿತಕ್ಕೆ ಒತ್ತು ನೀಡಲಾಗಿದೆ” ಎಂದರು.
“ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ 46,000 ಸರ್ಕಾರಿ ಶಾಲೆಗಳಲ್ಲಿ ಏಕಕಾಲಕ್ಕೆ ಪೋಷಕರ ಸಭೆಯನ್ನು ನಡೆಸುವ ಮೂಲಕ ಶಾಲಾ ಅಭಿವೃದ್ಧಿಯಲ್ಲಿ ಸಮುದಾಯದ ಸಹಭಾಗಿತ್ವವನ್ನು ಹೆಚ್ಚಿಸಲಾಗಿದೆ” ಎಂದು ಹೇಳಿದರು.
“ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಯೋಜನೆಗಳನ್ನು ಚುರುಕುಗೊಳಿಸಲಾಗಿದೆ. ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ಶೇಕಡಾ 20% ರಷ್ಟು ಹೆಚ್ಚಿಸುವ ಗುರಿಯನ್ನು ಶಿಕ್ಷಕರು ಹಾಗೂ ನಾವೆಲ್ಲರೂ ಜೊತೆಯಾಗಿ ತಲುಪೋಣ” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಕರ ಸಂಘವು ಮಧು ಬಂಗಾರಪ್ಪ ಅವರಿಗೆ “ಗುರುಕುಲ ಬಂಗಾರ” ಬಿರುದು ನೀಡಿ ಗೌರವಿಸಿತು. ಇದು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಗೌರವವನ್ನು ರಾಜ್ಯದ ಸಮಸ್ತ ಶಿಕ್ಷಕ ಸಮುದಾಯಕ್ಕೆ ಅರ್ಪಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

