ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾಗಲ್ ಪ್ರೇಮಿಯ ಅಟ್ಟಹಾಸಕ್ಕೆ ಯುವತಿ ಬರ್ಬರವಾಗಿ ಕೊಲೆಯಾಗಿದ್ದಾಳೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ, ಯುವತಿ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಲ್ಲೇಶ್ವರಂ ನಲ್ಲಿ ನಡೆದಿದೆ.
ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರಾಕ್ ಬಳಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪಾಗಲ್ ಪ್ರೇಮಿಯೊಬ್ಬ, ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಯುವತಿ ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಕಣ್ಣಿಗೆ ಖಾರದ ಪುಡಿ ಎರಚಿ ಬಳಿಕ ಕತ್ತು ಕೊಯ್ದು ಹತ್ಯೆಗೈದಿದ್ದಾನೆ.
20 ವರ್ಷದ ಯಾಮಿನಿಪ್ರಿಯಾ ಕೊಲೆಯಾದ ಯುವತಿ. ಮೃತ ಯುವತಿ ಕಾಲೇಜು ವಿದ್ಯಾರ್ಥಿನಿ. ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಬಂದ ಆರೋಪಿ ಖಾರದಪುಡಿ ಎರಚಿ, ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ವಿಗ್ನೇಶ್ ಕೊಲೆ ಮಾಡಿರುವ ಪಾಗಲ್ ಪ್ರೇಮಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.