ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಇಂದು ಪೊಲೀಸ್ ಅಧಿಅಕರಿಗಳ ಹಾಗೂ ಜೈಲಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ಇಂದು ನಡೆಯಲಿರುವ ಸಭೆಯಲ್ಲಿ ರಾಜ್ಯದ ಎಲ್ಲಾ ಜೈಲಿನ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೈಲಿನಲ್ಲಿ ಕಾನೂನು ಬಾಹಿರಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಇಂತಹ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಎಲ್ಲಾ ಪ್ರಮುಖ ಜೈಲುಗಳ ಜೈಲಾಧಿಕಾರಿಗಳು ಇಂದಿನ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಅಪರಾಧಿಗಳಿಗೆ ಜೈಲಿನಲ್ಲಿ ಶಿಕ್ಷೆ ಬದಲಾಗಿ ಸೌಲಭ್ಯ ಒದಗಿಸಿದರೆ ಹೇಗೆ? ಇಂತಹ ಅವಕಾಶ ಮಾಡಿಕೊಟ್ಟವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
