ಚಿಕ್ಕಬಳ್ಳಾಪುರ: ನೀಟ್ ಪರೀಕ್ಷಾ ಅಕ್ರಮ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಮತ್ತೊಂದೆಡೆ ನೀಟ್ ಪರೀಕ್ಷಾ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ಪ್ರಧಾಅನಿ ನರೇಂದ್ರ ಮೋದಿ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಬಂದಿಸಿದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟಿಸುತ್ತಿದೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಜಿಲ್ಲೆ ಜಿಲ್ಲೆಗಳಲ್ಲಿಯೂ ಹೋರಾಟ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ರಾಹುಲ್ ಗಾಂಧಿ ಬಂಧನ ವೀರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು. ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಭಾಗವಿಸಿದ್ದಾರೆ.
ಈ ವೇಳೆ ಮಾತನಾಡಿದ ಪರಮೇಶ್ವರ್, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದರು. ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತವೆ ಎಂದರೆ ಏನರ್ಥ? ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ ಎಂಬ ಅರಿವಿಲ್ಲವೇ? ಇದನ್ನು ಪ್ರಶ್ನಿಸುವುದು ನಮ್ಮ ಹಕ್ಕು ಎಂದು ಗುಡುಗಿದರು.
ನವದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಪರವಾಗಿ ನಿಂತು ಪ್ರಶ್ನಿಸುವವರನ್ನೇ ಬಂಧಿಸುವುದು ಎಷ್ಟರ ಮಟ್ಟಿಗೆ ಸರಿ? ದೇಶದ ವಿದ್ಯಾಮಾನವನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಈ ದೇಶದ ಯುವಕರಿಗೆ ಶಿಕ್ಷಣ ಕೊಡಬೇಕು ಎಂದು ಕಾನೂನಾತ್ಮಕವಾಗಿ ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಬ್ಬ ಪ್ರಜೆಯೂ ಶಿಕ್ಷಣ ಪಡೆಯಬೇಕು. ಈ ಬಗ್ಗೆ ಸರ್ಕಾರ ಜವಾಬ್ದಾರಿ ವಹಿಸಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ತಿಳಿಸಿದ್ದಾರೆ. ಆದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದ್ದರೆ ವಿದ್ಯಾರ್ಥಿಗಳ ಭವಿಷ್ಯದ ಕಥೆಯೇನು? ಎಂದು ಪ್ರಶ್ನಿಸಿದರು.
ಲಕ್ಷಾಂತರ ಯುವಕರು ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕೋರ್ಸ್‌ಗಳನ್ನು ಪೂರ್ಣಗೊಳಿಸಿ ಪ್ರಪಂಚದಾದ್ಯಂತ ಕೆಲಸ ಮಾಡುತ್ತಿದ್ದಾರೆ. ಮೊದಲು ಸಿಇಟಿ ಪರೀಕ್ಷೆಯನ್ನು ರಾಜ್ಯ ಸರ್ಕಾರವೇ ನಡೆಸುತ್ತಿತ್ತು. ಆ ಸಮಯದಲ್ಲಿ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆ ನಡೆಯುತ್ತಿತ್ತು. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದಾಗಲೂ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಂತರ ಕೇಂದ್ರ ಸರ್ಕಾರ ಸಿಇಟಿ ಬದಲಿಗೆ ನೀಟ್ ಪರೀಕ್ಷೆಯನ್ನು ಕೈಗೆತ್ತಿಕೊಂಡಿತು. ಅನೇಕರು ವಿರೋಧಿಸಿದರು, ವಿದ್ಯಾರ್ಥಿಗಳು ಒಪ್ಪಿಕೊಂಡರು. ಆದರೆ ಈಗ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿವೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆಯಾಗುತ್ತಿದೆ. ದೇಶದ ಯುವಕರ ಭವಿಷ್ಯ ಮುಖ್ಯ. ಅವರಿಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗ ನೀಡುವುದು ನಮ್ಮ ಜವಾಬ್ದಾರಿ. ಇಂದಿನ ಯುವಕರೇ ಮುಂದೆ ದೇಶ ಕಟ್ಟುವವರು. ಅವರ ಜೀವನ ರೂಪಿಸಬೇಕಿರುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

