ಬೆಂಗಳೂರು: ಸಾರಿಗೆ ನೌಕರರಿಗೆ ಬಾಕಿ ವೇತನ ಬಿಡುಗಡೆ ಮತ್ತು ವೇತನ ಪರಿಷ್ಕರಣೆಗೆ ಒತ್ತಾಯಿಸಿ, ರಾಜ್ಯದ ಸಾರಿಗೆ ನಿಗಮಗಳ ನೌಕರರು ಜನವರಿ 29ರಂದು ಬೆಂಗಳೂರು ಚಲೋ ನಡೆಸುವುದಾಗಿ ಘೋಷಿಸಿದ್ದಾರೆ.
ರಾಜ್ಯ ಸರ್ಕಾರದ ಜೊತೆಗೆ ಮಾತುಕತೆ ನಡೆಸಿದರೂ ಫಲಪ್ರದವಾಗದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಗಳ ಜಂಟಿ ಕ್ರಿಯಾ ಸಮಿತಿ ಬೆಂಗಳೂರು ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದೆ. ಸಾರಿಗೆ ನೌಕರರಿಗೆ ಕಳೆದ 38 ತಿಂಗಳಿಂದ ಬಾಕಿ ವೇತನ ನೀಡಿಲ್ಲ. 2024ರ ಜನವರಿ 1ರಿಂದ ಬರಬೇಕಿದ್ದ ವೇತನ ಪರಿಷ್ಕರಣೆ ಇನ್ನು ಜಾರಿಯಾಗಿಲ್ಲ.
ರಾಜ್ಯದಲ್ಲಿ ದೈನಂದಿನ ಸಾರ್ವಜನಿಕ ಸಾರಿಗೆ ಸೇವೆ ಖಚಿತಪಡಿಸುಕೊಳ್ಳುವ ನೌಕರರಲ್ಲಿ ಈ ವಿಳಂಬ ಆರ್ಥಿಕ ಒತ್ತಡ ಹೆಚ್ಚಿಸಿದೆ. 2024ರ ಜನವರಿಯಲ್ಲಿ ವೇತನ ಪರಿಷ್ಕರಣೆ ಆಗಬೇಕಿತ್ತು. ಸರ್ಕಾರದೊಂದಿಗೆ ಹಲವು ಸುತ್ತಿನ ಚರ್ಚೆಯ ನಂತರವೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ ಜನವರಿ 29ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಬೆಂಗಳೂರು ಚಲೋ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಲಾಗಿದೆ.
ಜ. 29ರಂದು ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಅಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

