HomeKarnatakaBig Update: ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

Big Update: ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ, ಮಕ್ಕಳ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ.

ಶುಭಮಂಗಳ ಆರ್‌.ವಿ. ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಯೋಜನೆ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ.

ಈ ಸುತ್ತೋಲೆಯು ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಶಾಲಾ ಕಾಲೇಜುಗಳ ಇತರ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭಗಳಲ್ಲಿ ಅಪಘಾತಗಳು ಸಂಭವಿಸದಂತೆ ಮಕ್ಕಳ ಮತ್ತು ಸಾರ್ವಜನಿಕರ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲಾ ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಮಕ್ಕಳ ರಕ್ಷಣಾ ನೀತಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾರ್ಗಸೂಚಿಯನ್ವಯ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆಗೆ ಬಗ್ಗೆ ಅಗತ್ಯ ಕ್ರಮವಹಿಸಲು ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ಸೂಚನೆಗಳನ್ನು ನೀಡಲಾಗಿರುತ್ತದೆ.

ಮುಂದುವರೆದು ಶಾಲಾ ಕಾಲೇಜುಗಳಲ್ಲಿ ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಇತರ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭಗಳಲ್ಲಿ ಸಂಭವಿಸಬಹುದಾದ ಅನಿರೀಕ್ಷಿತ ಅವಘಡಗಳ ಸಾಧ್ಯತೆಗಳನ್ನು ಗಮನದಲ್ಲಿರಿಸಿಕೊಂಡು, ಯಾವುದೇ ರೀತಿಯ ಅವಘಡಗಳಾಗದಂತೆ ತಡೆಗಟ್ಟುವ, ನಿವಾರಿಸುವ ಜೊತೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಂಡಾಗೂ ಅಪಘಾತ ಸಂಭವಿಸಿದಲ್ಲಿ, ಅಂತಹ ಅಪಘಾತಗಳನ್ನು ತ್ವರಿತವಾಗಿ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನಿರ್ವಹಣೆ ಮಾಡುವ ಜೊತೆಗೆ ಪರಿಸ್ಥಿತಿಯನ್ನು ಶಾಂತಗೊಳಿಸಿ ಮಕ್ಕಳು ಸೇರಿದಂತೆ ಸಾರ್ವಜನಿಕರ ರಕ್ಷಣೆಗೆ ಎಲ್ಲಾ ಶಾಲಾ/ ಕಾಲೇಜುಗಳ ಆಡಳಿತ ಮಂಡಳಿಗಳನ್ನೊಳಗೊಂಡಂತೆ ಪ್ರಾಂಶುಪಾಲರು/ ಮುಖ್ಯ ಶಿಕ್ಷಕರು/ ಶಿಕ್ಷಕರು ಹಾಗೂ ವ್ಯವಸ್ಥಾಪನಾ ಸಮಿತಿಗಳು ಈ ಕೆಳಕಂಡ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

* ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಧ್ವಜಾರೋಹಣ ಕಂಬದ ಬಳಿ ವಿದ್ಯುತ್ ತಂತಿಗಳು ಹಾದುಹೋಗದಂತೆ ಮತ್ತು ಕಂಬವು ವಿದ್ಯುತ್ ತಂತಿಗಳನ್ನು ಸಂಪರ್ಕಿಸದಂತೆ ಮುನ್ನೆಚ್ಚರಿಕ ವಹಿಸುವುದು.

* ಧ್ವಜಾರೋಹಣ ಕಂಬಕ್ಕೆ ಧ್ವಜವನ್ನು ಏರಿಸುವ ಅಥವಾ ಇಳಿಸುವ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳಬಾರದು. ಧ್ವಜಾರೋಹಣಾ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಧ್ವಜ ಸಿಕ್ಕಿಕೊಂಡಲ್ಲಿ ಯಾವುದೇ ಕಾರಣಕ್ಕೂ ಮಕ್ಕಳನ್ನು ಧ್ವಜಕಂಬಕ್ಕೆ ಹತ್ತಿಸಬಾರದು.

* ಮಕ್ಕಳ ಕವಾಯತು, ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ, ಮಕ್ಕಳು ಕುಳಿತುಕೊಳ್ಳುವ ಸ್ಥಳಗಳು ಸುರಕ್ಷಿತವಾಗಿರುವ ಬಗ್ಗೆ, ಕಾರ್ಯಕ್ರಮದ ಮೊದಲು ಹಾಗೂ ಆಗಿಂದಾಗ ಪರಿಶೀಲಿಸಿಕೊಳ್ಳತಕ್ಕದ್ದು.

* ಮಕ್ಕಳನ್ನು ಕಾರ್ಯಕ್ರಮ/ ಸ್ಪರ್ಧೆಗಳಿಗೆ ಕರೆದುಕೊಂಡು ಹೋಗುವ ಮತ್ತು ಹಿಂದಿರುಗಿ ಕರೆತರುವ ವಾಹನಗಳು ಸಮರ್ಪಕವಾಗಿರುವ ಬಗ್ಗೆ ಪರಿಶೀಲಿಸಿಕೊಳ್ಳುವುದು, ವಾಹನ ಚಾಲಕರು, ವೇಗಮಿತಿಯಲ್ಲಿ ಚಲಿಸುವಂತೆ ಸೂಚನೆ ನೀಡುವ ಜೊತೆಗೆ ಆಗಿಂದಾಗ್ಗೆ ಗಮನಹರಿಸುವುದು. ಪ್ರಮುಖವಾಗಿ ಚಾಲಕರು ಮದ್ಯಪಾನ ಮಾಡಿಲ್ಲ ಎಂದು ಖಚಿತಪಡಿಸಿಕೊಳ್ಳುವುದು. ವಾಹನದ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕರೆದೊಯ್ಯಬಾರದು.

* ಕಾರ್ಯಕ್ರಮ ನಡೆಸುವ ಎಲ್ಲಾ ಸ್ಥಳಗಳಲ್ಲಿ ಅಳವಡಿಸಿರುವ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸದಿರುವ ಬಗ್ಗೆ ಖಚಿತಪಡಿಸಿಕೊಳ್ಳುವ ಜೊತೆಗೆ ಮಕ್ಕಳು ಸೇರಿದಂತೆ ಸಾರ್ವಜನಿಕರ ಸಂಪರ್ಕಕ್ಕೆ ಬಾರದಂತೆ ವಿದ್ಯುತ್ ತಂತಿಗಳನ್ನು ಅಳವಡಿಸಲು ತಂತ್ರಜ್ಞರಿಗೆ ಸೂಚನೆ ನೀಡುವುದು.

* ವಿದ್ಯುತ್ ತಂತಿಗಳು ಇರುವಲ್ಲಿ ಮಳೆ ನೀರು ಸೋರದಂತೆ ಮತ್ತು ಇತರೆ ಯಾವುದೇ ಮೂಲದಿಂದ ನೀರು ಹರಿಯದಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.

* ಮಕ್ಕಳಿಗೆ ನೀಡುವ ನೀರು, ಪಾನೀಯ, ಆಹಾರ ಪದಾರ್ಥಗಳ ಶುಚಿತ್ವದ ಬಗ್ಗೆ ಪರಿಶೀಲಿಸುವುದು. ಮಕ್ಕಳಿಗೆ ವಿತರಿಸುವ ಪೂರ್ವದಲ್ಲಿ ಕಾರ್ಯಕ್ರಮ ಸಂಯೋಜಕರು ಪರಿಶೀಲಿಸಿ ಗುಣಮಟ್ಟವನ್ನು ಖಾತರಿಪಡಿಸಿಕೊಂಡ ನಂತರದಲ್ಲಿ ಮಕ್ಕಳಿಗೆ ವಿತರಿಸುವುದು.

* ಆಹಾರ ತಯಾರಿಸುವ ಸ್ಥಳಗಳಿಗೆ ಮಕ್ಕಳ ಪ್ರವೇಶವನ್ನು ನಿರ್ಬಂಧಿಸುವ ಜೊತೆಗೆ ಯಾವುದೇ ರೀತಿಯ ಬೆಂಕಿ ಅವಘಡವಾಗದಂತೆ ಸೇರಿದಂತೆ ಗ್ಯಾಸ್ ಸಿಲಿಂಡರ್ ಒಲೆಗಳು ಸಮರ್ಪಕವಾಗಿರುವ ಬಗ್ಗೆ ಆಗಿಂದಾಗ್ಗೆ ಪರಿಶೀಲಿಸಿ ನಿಗಾ ವಹಿಸುವುದು.

* ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸಮರ್ಪಕವಾಗಿ ವಾಹನ ನಿಲುಗಡೆ ಮಾಡಲು ಸೂಚನಾ ಫಲಕಗಳನ್ನು ಅಳವಡಿಸಿ, ವ್ಯವಸ್ಥಿತವಾಗಿ ವಾಹನ ನಿಲುಗಡೆ ಮಾಡುವಂತೆ ನಿರ್ದೇಶನ ನೀಡಿ, ಕಾರ್ಯಕ್ರಮದ ಸ್ಥಳದಿಂದ ಕನಿಷ್ಟ 100 ಮೀಟರ್ ದೂರದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸುವುದು.

* ಅನಿರೀಕ್ಷಿತವಾಗಿ ಸಂಭವಿಸಬಹುದಾದ ಸನ್ನಿವೇಶಗಳನ್ನು ಎದುರಿಸುವ ಕುರಿತು ಮಕ್ಕಳಿಗೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು, ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಹಿರಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡುವುದು.

* ಎಲ್ಲಾ ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಆಯೋಜನೆಯಲ್ಲಿ ತೊಡಗಿಸಿಕೊಳ್ಳುವಂತೆ ನಿರ್ದೇಶನ ನೀಡುವುದು. ಸ್ಥಳೀಯ ಆಡಳಿತಗಳು ಮಕ್ಕಳ ಸುರಕ್ಷತೆ ಕುರಿತು ಗಮನ ಹರಿಸುವುದು.

* ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸ್ಥಳೀಯ ಪೊಲೀಸ್, ವೈದ್ಯಕೀಯ ವ್ಯವಸ್ಥೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತಕ್ಕೆ ಮಕ್ಕಳ ಕಾರ್ಯಕ್ರಮದ ಕುರಿತು ಕಡ್ಡಾಯವಾಗಿ ಮಾಹಿತಿ ಒದಗಿಸಿ, ಯಾವುದೇ ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಲು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ತಿಳಿಸತಕ್ಕದ್ದು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular