ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಲ್ಲೋಹಳ್ಳಿ ಸಮೀಪ ಗುರುವಾರ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪೆಟ್ರೋಲ್ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಕ್ಕದಲ್ಲಿದ್ದ ಹಾಲಿನ ಲಾರಿಯೂ ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ ಎರಡು ಲಾರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಚಾಲಕರು ಸಮಯಪ್ರಜ್ಞೆಯಿಂದ ವಾಹನಗಳಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿಯ ಪ್ರಕಾರ, ಪೆಟ್ರೋಲ್ ತುಂಬಿದ್ದ ಲಾರಿಯು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಜ್ವಾಲೆಗಳು ವ್ಯಾಪಿಸಿವೆ. ಇದೇ ವೇಳೆ ಸಮೀಪದಲ್ಲಿ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಹಾಲು ಸಾಗಣೆ ಲಾರಿಗೂ ಬೆಂಕಿ ತಗುಲಿ ಎರಡೂ ವಾಹನಗಳು ಹೊತ್ತಿ ಉರಿದಿವೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿಯಿಂದ ವಾಹನಗಳು ಸಂಪೂರ್ಣ ಸುಟ್ಟುಹೋಗಿದ್ದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಗ್ನಿ ಅವಘಡದಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

