ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ನಮ್ಮ ಮೆಟ್ರೋ ಹಳದಿ ಮಾರ್ಗ, ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಹೆಚ್ ಎ ಎಲ್ ನಿಂದ ಮೇಖ್ರಿ ಸರ್ಕಲ್ ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅದ್ಧೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಮೇಖ್ರಿ ಸರ್ಕಲ್ ನಿಂದ ರಸ್ತೆ ಮಾರ್ಗವಾಗಿ ಪ್ರಧಾನಿ ಮೋದಿ ಕೆ.ಎಸ್.ಆರ್ ರೈಲು ನಿಲ್ದಾಣಕ್ಕೆ ತೆರಳಿದ್ದಾರೆ. ಈ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನಿಂತಿರುವ ಅಭಿಮಾನಿಗಳು, ಜನರು ಮೋದಿ, ಮೋದಿ ಎಂದು ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಜನರತ್ತ ಕೈ ಬೀಸಿ ಮುಂದೆ ಸಾಗಿದ್ದಾರೆ.
ಪ್ರಧಾನಿ ಮೋದಿ ಕೆ.ಎಸ್.ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋ ಸಂಚಾರ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.