ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಗುರುವಾರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಅಬ್ಬರದ ಸದ್ದಿಗೆ ಪೊಲೀಸ್ ಇನ್ ಸ್ಪೆಕ್ಟರ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.
ಸೊರಬದ ಮುಖ್ಯ ರಸ್ತೆಯಲ್ಲಿ ಗುರುವಾರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದು, ಧ್ವನಿವರ್ಧಕದ ಅಬ್ಬರದಿಂದ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಇನ್ ಸ್ಪೆಕ್ಟರ್ ರಾಜಶೇಖರ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಅಲ್ಲಿದ್ದವರು ಉಪಚರಿಸಿ ಕರೆದುಕೊಂಡು ಹೋಗಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗಕ್ಕೆ ಕಳುಹಿಸಲಾಗಿದೆ.
ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಎರಡು ಧ್ವನಿವರ್ಧಕ ಬೇಸ್ ಬಳಸಲಾಗಿದ್ದು, ಇದರಿಂದ ಧ್ವನಿವರ್ಧಕದ ಅಬ್ಬರದಿಂದ ರಾಜಶೇಖರ್ ಅವರಿಗೆ ಬಿಪಿ ಹೆಚ್ಚಾಗಿ ಕಿವಿಗೆ ತೊಂದರೆಯಾಗಿದೆ. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಸಂಘಟಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಡಿಜೆಗಳನ್ನು ವಶಕ್ಕೆ ಪಡೆಯಲು ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಸೂಚನೆ ನೀಡಿದ್ದಾರೆ.