ಬೆಂಗಳೂರು: ರಾಜ್ಯದ 7 ಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಪಿ) ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ 24 ಸರ್ಕಾರಿ ಮೆಡಿಕಲ್ ಕಾಲೇಜುಗಳಿವೆ. ರಾಜ್ಯದ ಪ್ರತಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಆರಂಭಿಸುವ ನೀತಿ ರಾಜ್ಯ ಸರ್ಕಾರದ್ದಾಗಿದೆ. ಬಜೆಟ್ ನಲ್ಲಿ ಕನಕಪುರ ಮತ್ತು ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಘೋಷಿಸಲಾಗಿದೆ. ಉಳಿದ 7 ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ತಿಳಿಸಿದ್ದಾರೆ.