HomeKarnataka21ನೇ ಶತಮಾನದ ಮೆಡಿಕಲ್ ಸೈನ್ಸ್ ಯುಗದಲ್ಲಿ ಬಾಣಂತಿಯರ ಸಾವು ನಾಚಿಕೆಗೇಡು: ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ...

21ನೇ ಶತಮಾನದ ಮೆಡಿಕಲ್ ಸೈನ್ಸ್ ಯುಗದಲ್ಲಿ ಬಾಣಂತಿಯರ ಸಾವು ನಾಚಿಕೆಗೇಡು: ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕ, ಬೌದ್ಧಿಕವಾಗಿ ದಿವಾಳಿಯಾಗಿದೆ. ಸರ್ಕಾರದ ಬೊಕ್ಕಸ ಬರಿದಾಗಿದೆ. ಗುಣಮಟ್ಟದ ಔಷಧಿ ಖರೀದಿ ಮಾಡಲೂ ದುಡ್ಡಿಲ್ಲದೇ ಕಳಪೆ ಔಷಧಿ ಪೂರೈಕೆ ಕಂಪನಿಗಳಿಂದ ಖರೀದಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯೇ ಲಭ್ಯವಿಲ್ಲ. ವೈದ್ಯರು ಹೊರಗಡೆ ತರಲು ಚೀಟಿ ಬರೆದು ಕೊಡುತ್ತಿದ್ದಾರೆ. ರಾಜ್ಯವನ್ನು ಇಂಥ ಅವಸ್ಥೆಗೆ ತಂದಿಟ್ಟಿದೆ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುಣಮಟ್ಟದ ಕಂಪನಿಗಳಿಂದ ಔಷಧಿ ಖರೀದಿಸಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಹಾಗಾಗಿ ಸಿಕ್ಕ ಸಿಕ್ಕ ಕಂಪನಿಗಳಿಂದ ಔಷಧಿ ಖರೀದಿಸುತ್ತಿದ್ದಾರೆ. ಅದರ ಪರಿಣಾಮದಿಂದಲೇ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದೆ ಎಂದು ಆರೋಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರಿಗೆ ಕೆಟ್ಟ ಮೇಲೆ ಬುದ್ಧಿ ಬಂದಂತಿದೆ. ಈಗ ಪ್ರಕರಣದ ಗಂಭೀರತೆ, ಸೂಕ್ಷ್ಮತೆ ಅರಿತಿದ್ದಾರೆ. ಬಳ್ಳಾರಿ ಬಾಣಂತಿಯರ ಸಾವಿನ ಪ್ರಕರಣದಲ್ಲಿ ಆರೋಗ್ಯ ಸಚಿವರು ಸಂಪೂರ್ಣ ವೈಫಲ್ಯ ಕಂಡಿದ್ದಾರೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರದತ್ತ ಬೆರಳು ತೋರುತ್ತಿದ್ದಾರೆ ಎಂದು ಕಿಡಿಕಾರಿದರು.

ಐವಿ ದ್ರಾವಣಕ್ಕೆ ಕೇಂದ್ರ ಅನುಮತಿ ನೀಡಿದೆ ಎಂದಿದ್ದಾರೆ. ಆದರೆ, ಕೇಂದ್ರದ ಅನುಮತಿ ಪಡೆಯುವಾಗ ಗುಣಮಟ್ಟದ ಔಷಧಿ ಕಳಿಸಿ ನಂತರದಲ್ಲಿ ಕಳಪೆ ಗುಣಮಟ್ಟದ್ದನ್ನು ಪೂರೈಸಿದರೆ ಯಾರು ಹೊಣೆ? ರಾಜ್ಯ ಸರ್ಕಾರ ಆಗಾಗ ತಪಾಸಣೆ ನಡೆಸಬೇಕಲ್ಲವೇ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಐವರು ಬಾಣಂತಿಯರ ಸಾವಿಗೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಮಳೆಯಾದರೂ ಕೇಂದ್ರ, ಜನಸಂಖ್ಯೆ ಜಾಸ್ತಿ ಆದ್ರೂ ಕೇಂದ್ರ ಕಾರಣ ಎನ್ನುವಂತಿದೆ ಇವರ ಮನಸ್ಥಿತಿ. ಇಂಥಹ ಧೋರಣೆ ಸರಿಯಲ್ಲ ಎಂದರು.

21ನೇ ಶತಮಾನದಲ್ಲಿ ಬಾಣಂತಿಯರ ಸಾವು ನಾಚಿಕೆಗೇಡು. 21ನೇ ಶತಮಾನದ ಮುಂದುವರಿದ ಮೆಡಿಕಲ್ ಸೈನ್ಸ್ ಯುಗದಲ್ಲಿ ಬಾಣಂತಿಯರ ಸಾವು ಎಂದರೆ ನಿಜಕ್ಕೂ ನಾಚಿಕೆಗೇಡಿನ ಸಂಗತಿ. ರಾಜ್ಯ ಕಾಂಗ್ರೆಸ್ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular