ಸಾಗರ: ಜೋಗ ಜಲಪಾತದ ಬಳಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಿದನೂರು ಗ್ರಾಮದ ಸಮೀಪದ ಚಾನೆಲ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ.
ತುಮಕೂರು ಮೂಲದ ಯುವತಿ ಬಿದನೂರು ಚಾನೆಲ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಮೀನುಗಾರರು ತಕ್ಷಣ 112 ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಕಾರ್ಗಲ್ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಪ್ರೇಮ ವೈಫಲ್ಯದಿಂದ ಮನನೊಂದು ಜೋಗ ಜಲಪಾತದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿದುಬಂದಿದೆ.
ಯುವತಿಯ ಪೋಷಕರಿಗೆ ಮಾಹಿತಿ ನೀಡಿ, ಅವರನ್ನು ಸ್ಥಳಕ್ಕೆ ಕರೆಸಿದ ಪೊಲೀಸರು ಯುವತಿಗೆ ಬುದ್ಧಿವಾದ ಹೇಳಿದ್ದಾರೆ. ಸಮಯಪ್ರಜ್ಞೆಯಿಂದ 112ಕ್ಕೆ ಮಾಹಿತಿ ನೀಡಿದ ಮೀನುಗಾರರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

