ನವದೆಹಲಿ: ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರತಿ ಪ್ರಕರಣದಲ್ಲಿಯೂ ಪ್ರಾಥಮಿಕ ತನಿಖೆ ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ವಿವರ ಮತ್ತು ತಾರ್ಕಿಕ ಮಾಹಿತಿಯುಳ್ಳ ವರದಿ ಮೇಲಾಧಿಕಾರಿಗೆ ದೊರೆತಿದ್ದರೆ ಹಾಗೂ ಯಾವುದೇ ವ್ಯಕ್ತಿ ಅದನ್ನು ನೋಡಿದರೆ ಮೇಲ್ನೋಟಕ್ಕೆ ಅಪರಾಧ ನಡೆದಿದೆ ಎಂಬುದು ತಿಳಿಯುವಂತಿದ್ದರೆ ಪ್ರಾಥಮಿಕ ತನಿಖೆಯ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ, ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
2024ರ ಮಾರ್ಚ್ 4ರಂದು ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಹೆಚ್ಚುವರಿ ಅಡ್ವೊಕೇಟ್ ಜನರಲ್ ನಿಶಾಂತ್ ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಇದೇ ವೇಳೆ ಪುರಸ್ಕರಿಸಿದೆ.
ಈ ಸಂದರ್ಭದಲ್ಲಿ ಲಲಿತಕುಮಾರಿ ವರ್ಸಸ್ ಉತ್ತರ ಪ್ರದೇಶ ಸರ್ಕಾರದ ಪ್ರಕರಣದಲ್ಲಿ ಸಂವಿಧಾನ ಪೀಠ ನೀಡಿದ ತೀರ್ಪನ್ನು ಉಲ್ಲೇಖಿಸಿದ ಸುಪ್ರೀಂಕೋರ್ಟ್ ಪ್ರಾಥಮಿಕ ತನಿಖೆ ಅಗತ್ಯವಿದೆಯೇ ಅಥವಾ ಇಲ್ಲವೇ ಎಂಬುದು ಪ್ರತಿ ಪ್ರಕರಣದ ವಾಸ್ತವಾಂಶ ಮತ್ತು ಸನ್ನಿವೇಶಗಳಿಗೆ ಅನುಗುಣವಾಗಿ ಬದಲಾವಣೆಯಾಗುತ್ತದೆ ಎಂದು ಹೇಳಿದೆ.
ಬೆಸ್ಕಾಂ ಉಪ ಮಹಾ ವ್ಯವಸ್ಥಾಪಕರಾಗಿದ್ದ ಪ್ರತಿವಾದಿ ಟಿ.ಎನ್. ಸುಧಾಕರ ರೆಡ್ಡಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ನೇರವಾಗಿ ಎಫ್ಐಆರ್ ದಾಖಲಿಸುವ ಮೂಲಕ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಹೈಕೋರ್ಟ್ ನೀಡಿದ್ದ ತೀರ್ಪು ದೋಷಪೂರಿತವಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.