ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸೆಪ್ಟೆಂಬರ್ 1 ಮತ್ತು 2 ರಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ಸೋಮವಾರ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಸೆಪ್ಟೆಂಬರ್ 2ರಂದು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅರಮನೆಗೆ ಭೇಟಿ ನೀಡುವಂತೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಬರೆದ ಪತ್ರಕ್ಕೆ ರಾಷ್ಟ್ರಪತಿ ಸ್ಪಂದಿಸಿದ್ದು, ಸೆಪ್ಟೆಂಬರ್ 2 ರಂದು ಬೆಳಿಗ್ಗೆ 8:50 ಕ್ಕೆ ಅರಮನೆಯಲ್ಲಿ ಬೆಳಗಿನ ಉಪಹಾರ ಸೇವಿಸಲಿದ್ದಾರೆ.
ಸೆಪ್ಟೆಂಬರ್ 1 ರಂದು ಮಧ್ಯಾಹ್ನ 3.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮ ಮೈಸೂರಿಗೆ ಆಗಮಿಸಲಿದ್ದು, ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಲಿದ್ದಾರೆ. ಮಾನಸಗಂಗೋತ್ರಿ ನೈಮಿಷಂ ಕ್ಯಾಂಪಸ್ ನಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ವಜ್ರ ಮಹೋತ್ಸವದಲ್ಲಿ ರಾಷ್ಟ್ರಪತಿ ಭಾಗವಹಿಸಲಿದ್ದು, ರಾಡಿಸನ್ ಬ್ಲೂ ಹೋಟೆಲ್ ಗೆ ತೆರಳುವರು. ರಾತ್ರಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ.
ಸೆಪ್ಟೆಂಬರ್ 2ರಂದು ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಕುಟುಂಬದವರೊಂದಿಗೆ ಉಪಹಾರ ಸೇವಿಸಲಿದ್ದಾರೆ. ರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ಸೋಮವಾರದಿಂದ ಮಂಗಳವಾರ ಮಧ್ಯಾಹ್ನದವರೆಗೆ ಅರಮನೆಗೆ, ಸೋಮವಾರ ಮಧ್ಯಾಹ್ನದಿಂದ ರಾತ್ರಿಯವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.