ಬೆಂಗಳೂರು: ಹಾಸನ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹಾಸನ ಲೋಕಾಯುಕ್ತ ಎಸ್.ಪಿ.ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವೇಳೆ ತಮ್ಮ ಆಸ್ತಿ ಮತ್ತು ಆದಾಯಕ್ಕೆ ಸಂಬಂಧಿಸಿದಂತೆ ನಿಖರ ಮಾಹಿತಿ ನೀಡಿಲ್ಲ, ತಪ್ಪು ಮಾಹಿತಿ ನೀಡಲಾಗಿದೆ ಎನ್ನುವ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿ ವರದಿ ನೀಡುವಂತೆ ಹಾಸನ ಲೋಕಾಯುಕ್ತ ಎಸ್ಪಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಬಿ. ಶಿವಪ್ರಸಾದ್ ಅವರು ಬುಧವಾರ ಈ ಕುರಿತಾಗಿ ವಕೀಲ ಬಿ.ಪಿ. ಸಂದೀಪ್ ಅವರು ಸಲ್ಲಿಸಿದ ಖಾಸಗಿ ದೂರಿನ ವಿಚಾರಣೆ ನಡೆಸಿದ್ದಾರೆ.
ಪ್ರೀತಂ ಗೌಡ ಅವರು 2018 ಮತ್ತು 2023ರ ಚುನಾವಣೆಯ ವೇಳೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಆಸ್ತಿ ಮತ್ತು ಆದಾಯದ ಮಾಹಿತಿ ಸರಿಯಾಗಿ ನೀಡದೇ ಮರೆಮಾಚಿದ್ದಾರೆ ಎಂದು ಆರೋಪಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯಿದೆ ಅನ್ವಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿದ್ದು, ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಲಾಗಿದೆ.

