ಬೆಂಗಳೂರು: ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರು ಯಾರೇ ಆಗಿರಲಿ, ಯಾವುದೇ ಪಕ್ಷದವರಾಗಿರಲಿ ಅವರನ್ನು ರಕ್ಷಿಸುವ ಮತ್ತು ಬೆಂಬಲಿಸುವ ಕೆಲಸ ಕಾಂಗ್ರೆಸ್ ಮಾಡಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣ ಒಪ್ಪುವುದಿಲ್ಲ. ಆ ವ್ಯಕ್ತಿಯನ್ನು ಬಂಧಿಸಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ ಚರ್ಚಿಸಬೇಕಾದ ಮುಖ್ಯ ವಿಷಯ ಬೇರೆಯೇ ಇದೆ. ವಿದ್ಯಾರ್ಥಿಗಳ ಭವಿಷ್ಯದ ಹಿತರಕ್ಷಣೆ ಕುರಿತು ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಆದ್ರೆ, ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಹಾಸ್ಯಾಸ್ಪದ ಮಾತ್ರವಲ್ಲ, ಬಾಲಿಶತನದ್ದು ಎಂದು ಟಾಂಗ್ ನೀಡಿದರು.
ಬಿಜೆಪಿ ನಾಯಕರು ಪ್ರಧಾನಿ ಮೋದಿ ಮೆಚ್ಚಿಸಲು ಪ್ರತಿಭಟನೆ ಮಾಡುತ್ತಿದ್ದಾರೆ. ಕೇಂದ್ರದ ಅಸಮರ್ಥ ಶಿಕ್ಷಣ ಸಚಿವರ ರಾಜಿನಾಮೆಗಾಗಿ ಪ್ರತಿಭಟಿಸಿ. ನೀಟ್ ಅವ್ಯವಸ್ಥೆಯನ್ನು ಸರಿಪಡಿಸಲು ಬಿಜೆಪಿ ಪ್ರತಿಭಟನೆ ಮಾಡಲಿ. ಉದ್ಯೋಗ ಭದ್ರತೆ, ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ಪ್ರತಿಭಟಿಸಿ. ಹೀಗೆ ಮಾಡಿದಲ್ಲಿ ಜನರ ವಿಶ್ವಾಸವನ್ನು ಸ್ವಲ್ಪವಾದರೂ ಗಳಿಸಬಹುದು ಎಂದು ಗುಡುಗಿದ್ದಾರೆ.

