HomeKarnatakaಪ್ರಸಿದ್ಧ ಪ್ರವಾಸಿ ತಾಣ ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶ ತಾತ್ಕಾಲಿಕ ಬಂದ್: ಅರಣ್ಯ ಇಲಾಖೆ...

ಪ್ರಸಿದ್ಧ ಪ್ರವಾಸಿ ತಾಣ ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶ ತಾತ್ಕಾಲಿಕ ಬಂದ್: ಅರಣ್ಯ ಇಲಾಖೆ ಆದೇಶ

ಶಿವಮೊಗ್ಗ: ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾದ ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶವನ್ನು ಮೇ 21 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧಿಸಿ ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮೇ 18 ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ‘ಕಂಜನ್’ ಹಾಗೂ ‘ಮಾರ್ತಾಂಡ'(ಮಖ್ನಾ) ಎಂಬ ಸಾಕಾನೆಗಳನ್ನು ಸ್ನಾನ ಮಾಡಿಸುತ್ತಿದ್ದ ಸಂದರ್ಭದಲ್ಲಿ, ಈ ಎರಡು ಆನೆಗಳ ನಡುವೆ ಕಾಳಗ (ಜಗಳ) ನಡೆದಿದೆ. ಈ ವೇಳೆ ನದಿಯ ಬಳಿ ನಿಂತು ಆನೆಗಳನ್ನು ವೀಕ್ಷಿಸುತ್ತಿದ್ದ ಮಹಿಳಾ ಪ್ರವಾಸಿಯೊಬ್ಬರು ಆಕಸ್ಮಿಕವಾಗಿ ಸಿಲುಕಿ ಸಾವನ್ನಪ್ಪಿದ ಅತ್ಯಂತ ಆಘಾತಕಾರಿ ಹಾಗೂ ದುಃಖಕರ ಘಟನೆ ಸಂಭವಿಸಿತ್ತು.

ಈ ದುರಂತದ ಹಿನ್ನೆಲೆಯಲ್ಲಿ, ಇಲಾಖಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೊಸದಾಗಿ ಪ್ರಮಾಣಿತ ಕಾರ್ಯ ವಿಧಾನವನ್ನು (SOP) ರೂಪಿಸುವ ಅಗತ್ಯವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರ ನಿರ್ದೇಶನದ ಮೇರೆಗೆ, ಈ ಹೊಸ ಸುರಕ್ಷತಾ ನಿಯಮಾವಳಿಗಳು ಸಿದ್ಧವಾಗುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಕ್ರೆಬೈಲು ಆನೆ ಬಿಡಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಅರಣ್ಯ ಇಲಾಖೆಯ ಮನವಿ: ಸಾರ್ವಜನಿಕರಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಈ ಪ್ರಕಟಣೆ ಹೊರಡಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಇಲಾಖೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕಾಗಿ ಶಿವಮೊಗ್ಗದ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕೋರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular