ಬೆಂಗಳೂರು: ಎಸ್.ಎಸ್.ಎಲ್.ಸಿ, ಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿರುವ ಪ್ರಕರಣ ಬೆನ್ನಲ್ಲೇ ಎಚ್ಚೆತ್ತಿರುವ ಪಿಯು ಬೋರ್ಡ್ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕ್ರಮಕ್ಕೆ ಮುಂದಾಗಿದೆ.
ಪರೀಕ್ಷೆಗೂ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿ ಕಿಡಿಗೇಡಿಗಳು ವಿದ್ಯಾರ್ಥಿಗಳ ಬವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ಇಂತಹ ಕಿಡಿಗೇಡಿಗಳ ಹುಚ್ಚಾಟಕ್ಕೆ ಬ್ರೇಕ್ ಹಾಕಲು ಪಿಯು ಬೋರ್ಟ್ ಹೊಸ ಅಸ್ತ್ರ ಪ್ರಯೋಗಿಸಿದೆ.
ಕೆಲದಿನಗಳಿಂದೆ ಎಸ್.ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಹಾಗೂ ಪಿಯು ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರ್ಲ್ ಆಗಿದ್ದವು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಪ್ರಶ್ನೆ ಪತ್ರಿಕೆ ಲೀಕ್ ಮಾಡುವ ಶಿಕ್ಷಕರು, ಉಪನ್ಯಾಸಕರು, ಶಿಕ್ಷಣ ಸಂಸ್ಥೆ ಹಾಗೂ ಕಾಲೇಜುಗಳನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಲು ಮುಂದಾಗಿದೆ.
ಅಂತಹ ಶಾಲೆ, ಕಾಲೇಜುಗಳನ್ನು ಕಪ್ಪುಪಟ್ಟಿಗೆ ಸೇರಿಸುವುದರ ಜೊತೆಗೆ ಆ ಶಿಕ್ಷಣ ಸಂಸ್ಥೆ ಹಾಗೂ ಕಾಲೇಜುಗಳ ಅನುದಾನ ಮತ್ತು ಮಾನ್ಯತೆಯನ್ನು ರದ್ದು ಮಾಡಲು ನಿರ್ಧರಿಸಿದೆ. ಇನ್ಮುಂದೆ ಪ್ರಶ್ನೆ ಪತ್ರಿಕೆಗಳು ಲೀಕ್ ಆದರೆ ಅದು ಯಾವ ಕಾಲೇಜಿನಿಂದ ಆಗಿದೆ ಎಂದು ತಿಳಿಯುತ್ತಿದ್ದಂತೆ ಆ ಕಾಲೇಜುಗಳ ಮಾನ್ಯತೆ ರದ್ದು ಮಾಡಲಾಗುತ್ತದೆ. ಕಾಲೇಜನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿ ಅನುದಾನವನ್ನು ಸ್ಥಗಿತಗೊಳಿಸಲಾಗುತ್ತದೆ. ಅನುದಾನ ರಹಿತ ಕಾಲೇಜುಗಳಾದರೆ ಆ ಕಾಲೇಜಿನ ಮಾನ್ಯತೆ ರದ್ದುಗೊಳಿಸಲಾಗುತ್ತದೆ.
ಅಲ್ಲದೇ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಶಾಲೆ ಹಾಗೂ ಕಾಲೇಜಿನ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

