ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿಎಂ ಮೂಡಾ ಹಗರಣಕ್ಕೂ ವ್ಯತ್ಯಾಸವಿದೆ: ಚುನಾವಣಾ ಬಾಂಡ್‌ ನಡಿ ಎಲ್ಲ ಪಕ್ಷಗಳು ದೇಣಿಗೆ ಪಡೆದಿವೆ: ಆರ್.ಅಶೋಕ್

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ. ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು.

ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್‌ಐಆರ್‌ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಯಾರಿಂದಲೋ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗೆ ದೂರು ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡುತ್ತಿದ್ದಾರೆ. ಮೊದಲು ಲೋಕಾಯುಕ್ತ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು. ಈಗ ಸಿಬಿಐ ಅಧಿಕಾರ ಕಿತ್ತುಕೊಳ್ಳಲು ಕ್ರಮ ವಹಿಸಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read