ಧಾರವಾಡ: ಖಾಲಿ ಹುದ್ದೆಗಳ ನೇಮಕಾತಿ ಮಾಡುವಂತೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ರಾಜ್ಯ ಬಿಜೆಪಿ ನಾಯಕರು ಬೆಂಬಲ ನೀಡಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಣ್ಬಕ ನೀಡಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಉದ್ಯೋಗ ನೀಡುವಂತೆ ಆಗ್ರಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸರ್ಕಾರಕ್ಕೆ ಉದ್ಯೋಗಾಕಾಂಕ್ಷಿಗಳ ನೋವು ಕಾಣುತ್ತಿಲ್ಲವೇ? ಎಂದು ಕಿಡಿಕಾರಿದ್ದಾರೆ.
ಕಳೆದ ಎರಡೂವರೆ ವರ್ಷಗಳಲ್ಲಿ ಒಬ್ಬ ನಿರುದ್ಯೋಗಿಗೂ ಉದ್ಯೋಗ ನೀಡಿಲ್ಲ. ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಮತ್ತು ಸಂಬಳ ನೀಡಲು ಸಹ ಹಣವಿಲ್ಲ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಹಣಕಾಸು ಇಲಾಖೆ 65,000 ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ನೀಡಿ ಆರು ತಿಂಗಳಾದರೂ ಒಂದು ಸಂದರ್ಶನ ಸಹ ಕರೆದಿಲ್ಲ. ತಕ್ಷಣವೇ ನೇಮಕಾತಿ ಪ್ರಕ್ರಿಯೆಗಳನ್ನು ಆರಂಭಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

